ADVERTISEMENT

ರಸ್ತೆ ತಡೆ: ಸರ್ಕಾರದ ವಿರುದ್ಧ ಆಕ್ರೋಶ

ಜಿಲ್ಲೆಯಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದ ಸುಗ್ರೀವಾಜ್ಞೆ– ಮಸೂದೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 15:20 IST
Last Updated 25 ಸೆಪ್ಟೆಂಬರ್ 2020, 15:20 IST
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಮತ್ತು ಮಸೂದೆಗಳನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ರಸ್ತೆ ತಡೆ ಮಾಡಿ ಧರಣಿ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಮತ್ತು ಮಸೂದೆಗಳನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ರಸ್ತೆ ತಡೆ ಮಾಡಿ ಧರಣಿ ನಡೆಸಿದರು.   

ಕೋಲಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಸುಗ್ರೀವಾಜ್ಞೆಗಳು ಮತ್ತು ರೂಪಿಸಿರುವ ಮಸೂದೆಗಳು ಜಿಲ್ಲೆಯಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದ್ದು, ರೈತ ಸಂಘಟನೆಗಳ ಸದಸ್ಯರು ಶುಕ್ರವಾರ ಬೀದಿಗಿಳಿದು ಹೋರಾಟ ನಡೆಸಿದರು.

ಸಂಘಟನೆಗಳ ಸದಸ್ಯರು ಹಲವೆಡೆ ಹೆದ್ದಾರಿ ತಡೆ, ರಸ್ತೆ ಬಂದ್‌ ಮಾಡಿ ಮತ್ತು ಮಾನವ ಸರಪಳಿ ರಚಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರಗಳು ಕೋವಿಡ್‌–19 ಪರಿಸ್ಥಿತಿಯ ಲಾಭ ಪಡೆದು ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್‌ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತಂದಿವೆ. ಸರ್ಕಾರಗಳ ಜನ ವಿರೋಧಿ ನೀತಿಯಿಂದ ರೈತರು, ಕಾರ್ಮಿಕರು ಹಾಗೂ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ದೂರಿದರು.

ADVERTISEMENT

‘ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಬಂಡವಾಳಶಾಹಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಸರ್ಕಾರಗಳಿಗೆ ರೈತಪರ ಕಾಳಜಿಯಿಲ್ಲ. ಸುಗ್ರೀವಾಜ್ಞೆ ಮೂಲಕ ರೈತ ವಿರೋಧಿ ಮಸೂದೆ ರೂಪಿಸುತ್ತಿರುವ ಸರ್ಕಾರಗಳು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿವೆ’ ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಿಡಿಕಾರಿದರು.

‘ಹೊಸ ಕಾಯ್ದೆ ಜಾರಿ ಸಂಬಂಧ ಸರ್ಕಾರಗಳು ಸಮಗ್ರ ಚರ್ಚೆ ನಡೆಸದೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿವೆ. ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ದೇಶದ ಕೃಷಿ ಕ್ಷೇತ್ರದ ಮೇಲೆ ಗದಾಪ್ರಹಾರ ನಡೆಸುತ್ತಿವೆ. ಹಣವಂತರ ಹಿತರಕ್ಷಣೆಗಾಗಿ ರೈತ ಕುಲ ನಾಶ ಮಾಡಲು ಹೊರಟಿವೆ’ ಎಂದು ಗುಡುಗಿದರು.

ರೈತರು ಬೀದಿ ಪಾಲು: ‘ಹೂಡಿಕೆದಾರರು, ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೋದ್ಯಮಿಗಳಿಗೆ ಕೆಂಪು ಹಾಸಿನ ಸ್ವಾಗತ ನೀಡುತ್ತಿರುವ ಸರ್ಕಾರಗಳು ರೈತರನ್ನು ಬೀದಿ ಪಾಲು ಮಾಡುತ್ತಿವೆ. ಅಭಿವೃದ್ಧಿಯ ಸೋಗಿನಲ್ಲಿ ರೈತರನ್ನು ಕೃಷಿ ಜಮೀನಿನಿಂದ ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ. ಕೃಷಿ ಭೂಮಿಯನ್ನು ಕಾರ್ಪೊರೇಟ್‌ ಕಂಪನಿಗಳಿಗೆ ಒತ್ತೆಯಿಡುವ ಸಂಚು ಮಾಡುತ್ತಿವೆ’ ಎಂದು ಧರಣಿನಿರತರು ಆರೋಪಿಸಿದರು.

‘ಸರ್ಕಾರಗಳು ಜನಪರವಾಗಿ ಆಲೋಚಿಸಬೇಕು. ತರಾತುರಿಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಎಲ್ಲಾ ಕಾಯ್ದೆಗಳನ್ನು ಹಿಂಪಡೆಯಬೇಕು. ಜನಪ್ರತಿನಿಧಿಗಳು ಪಕ್ಷಾತೀತವಾಗಿ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ ಎತ್ತಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್‌, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌, ಸದಸ್ಯರಾದ ನಾಗರಾಜಗೌಡ, ನಾರಾಯಣಪ್ಪ, ಲೋಕೇಶ್, ತಿಮ್ಮಣ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.