ADVERTISEMENT

ಪೌರ ಕಾರ್ಮಿಕರು 3ನೇ ದರ್ಜೆ ಪ್ರಜೆಗಳಲ್ಲ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 15:14 IST
Last Updated 23 ಅಕ್ಟೋಬರ್ 2021, 15:14 IST

ಕೋಲಾರ: ‘ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಪೌರ ಕಾರ್ಮಿಕರನ್ನುಸಮಾಜ ಮೂರನೇ ದರ್ಜೆಯ ಪ್ರಜೆಗಳಂತೆ ಕಾಣುತ್ತಿದೆ’ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎನ್.ಗೋಪಾಲಕೃಷ್ಣ ಕಳವಳ ವ್ಯಕ್ತಪಡಿಸಿದರು.

ಇಲ್ಲಿ ಶನಿವಾರ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ನಗರಸಭೆ ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿ, ‘ಇಡೀ ಜಗತ್ತು ಕೊರೊನಾ ಸೋಂಕಿನ ಮುಂದೆ ಮಂಡಿಯೂರಿ ಕುಳಿತಿದೆ. ಇಂತಹ ಆತಂಕದ ಪರಿಸ್ಥಿತಿಯಲ್ಲೂ ಪೌರ ಕಾರ್ಮಿಕರು ಜೀವದ ಹಂಗು ತೊರೆದು ಹಗಲಿರುಳು ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾರೆ’ ಎಂದು ಸ್ಮರಿಸಿದರು.

‘ಪೌರ ಕಾರ್ಮಿಕರು ಕುಟುಂಬ ಸದಸ್ಯರಿಂದ ದೂರವಾಗಿ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಗೆ ಬೆಲೆ ಕಟ್ಟಲಾಗುವುದಿಲ್ಲ. ಪೌರ ಕಾರ್ಮಿಕರಲ್ಲಿ ಶೇ 90ರಷ್ಟು ಮಂದಿ ನಾನಾ ಕಾಯಿಲೆಗೆ ತುತ್ತಾಗಿ ಸೇವಾವಧಿ ಪೂರ್ಣಗೊಳ್ಳುವ ಮುನ್ನವೇ ಮೃತಪಡುತ್ತಿದ್ದಾರೆ. ಶೇ 10ರಷ್ಟು ಮಂದಿ ಮಾತ್ರ ಸೇವಾವಧಿ ಪೂರ್ಣಗೊಳಿಸಿ ಪಿಂಚಣಿ ಪಡೆಯುತ್ತಾರೆ’ ಎಂದು ಹೇಳಿದರು.

ADVERTISEMENT

‘ದೇಶದಲ್ಲಿ ಕೃಷಿ, ಶಿಕ್ಷಣ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಪ್ರತ್ಯೇಕವಾಗಿ ಅನುದಾನ ಮೀಸಲಿಡಲಾಗುತ್ತಿದೆ. ಅದೇ ರೀತಿ ಪೌರ ಕಾರ್ಮಿಕರ ಕಲ್ಯಾಣಕ್ಕೆ ಪ್ರತ್ಯೇಕ ಬಜೆಟ್ ರೂಪಿಸಬೇಕು. ಪೌರ ಕಾರ್ಮಿಕರು ಸಹ ಮನುಷ್ಯರೇ. ಜನರು ಅವರನ್ನು ಸಮಾಜದ ಅವಿಭಾಜ್ಯ ಅಂಗವೆಂದು ಪರಿಗಣಿಸಬೇಕು. ಪೌರ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಬೇಕು’ ಎಂದು ಕಿವಿಮಾತು ಹೇಳಿದರು.

‘ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸ್ವಚ್ಛತಾ ಕಾರ್ಯ ನಿರ್ವಹಿಸುವಾಗ ಕಡ್ಡಾಯವಾಗಿ ಸುರಕ್ಷತಾ ಸಲಕರಣೆಗಳನ್ನು ಬಳಕೆ ಮಾಡಬೇಕು’ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯ ಎಸ್.ಸಿ.ವೆಂಕಟಕೃಷ್ಣಪ್ಪ ಸಲಹೆ ನೀಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಕೋಶಾಧ್ಯಕ್ಷ ಜಿ.ಶ್ರೀನಿವಾಸ್, ಕಾರ್ಯದರ್ಶಿ ನಂದೀಶ್‌ಕುಮಾರ್, ಕಾರ್ಯಕ್ರಮಾಧಿಕಾರಿ ಶರಣಪ್ಪ ಗಬ್ಬೂರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.