
ಮಾಸ್ತಿ (ಮಾಲೂರು): ವಾರ್ಷಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪೂರ್ವ ಸಿದ್ಧತೆ ಕುರಿತು ತಾಲ್ಲೂಕು ಆಡಳಿತ ಅಧಿಕಾರಿಗಳು ಸೋಮವಾರ ಸಂಜೆ ಮಾಸ್ತಿ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ತಹಶೀಲ್ದಾರ್ ಎಂ.ವಿ.ರೂಪ ಮಾತನಾಡಿ, ಮಾಸ್ತಿ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಓದುತ್ತಿರುವ ಎಸ್‌ಎಸ್ಎಲ್‌ಸಿ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಪೋಷಕರಿಗೆ ಕಿವಿಮಾತನ್ನು ಹೇಳಿದರು.
ಕಾರ್ಯನಿರ್ವಾಹಕ ಅಧಿಕಾರಿ ವಿ.ಕೃಷ್ಣಪ್ಪ ಮಾತನಾಡಿ, ಮಕ್ಕಳಿಗೆ ಆಸ್ತಿ ಮಾಡಬೇಡಿ. ಮಕ್ಕಳನ್ನು ಆಸ್ತಿವಂತರನ್ನಾಗಿ ಮಾಡಿ ಎಂದು ಪೋಷಕರಿಗೆ ಹೇಳುವುದರ ಮೂಲಕ ಮಕ್ಕಳನ್ನು ಪರೀಕ್ಷೆಗೆ ತಯಾರಿ ನಡೆಸಿ ಎಂದು ಸೂಚನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ ಮಾತನಾಡಿ, ಶಿಕ್ಷಕರು ಕೊಟ್ಟಿರುವಂತಹ ಪಠ್ಯ ವಿಷಯವನ್ನು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕ್ರಮಬದ್ಧವಾಗಿ ಅಭ್ಯಾಸ ಮಾಡಿ. ಪ್ರತಿ ದಿನ ನಡೆಯುವ ವಿಶೇಷ ತರಗತಿಗಳಿಗೆ ಹಾಜರಾಗಿ ಶಿಕ್ಷಕರು ನೀಡುವಂತಹ ಅಭ್ಯಾಸ ಮಾಡುವಂತೆ ಸಲಹೆ ನೀಡಿದರು. ವಾರ್ಷಿಕ ಪರೀಕ್ಷೆಗೆ ಕೇವಲ 59 ದಿನಗಳು ಬಾಕಿ ಇದ್ದು, ಈ ದಿನಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಮಕ್ಕಳಿಗೆ ತಿಳಿಸಿದರು.
ಶಿಕ್ಷಣ ಇಲಾಖೆ ಸಮನ್ವಾಯಾಧಿಕಾರಿ ಟಿ.ವೆಂಕಟಸ್ವಾಮಿ, ಕೆಪಿಎಸ್ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಕ್ರಂಪಾಷ, ಎಸ್.ಎ.ವೆಂಕಟಪ್ಪ ಮತ್ತು ಶಿಕ್ಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.