ಕೋಲಾರ: ‘ಜಿಲ್ಲೆಯ 3 ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ ಸುಸೂತ್ರವಾಗಿ ಪರೀಕ್ಷೆ ನಡೆಸಿ’ ಎಂದು ನಗರದ ಸರ್ಕಾರಿ ಬಾಲಕರ ಜೂನಿಯರ್ ಕಾಲೇಜು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ರಮೇಶ್‌ಗೌಡ ಪರೀಕ್ಷಾ ಮೇಲ್ವಿಚಾರಕರಿಗೆ ಸೂಚಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ‘ಸಿಬ್ಬಂದಿಯ ಪರೀಕ್ಷಾ ದಿನ ಬೆಳಿಗ್ಗೆ 8.30ಕ್ಕೆ ಕೇಂದ್ರದಲ್ಲಿ ಹಾಜರಿರಬೇಕು. ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ನೀಡಬೇಕು’ ಎಂದು ತಿಳಿಸಿದರು.
‘ಪರೀಕ್ಷಾ ದಿನದಂದು ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಯು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಜತೆಗೆ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದಾರೆ. ಕೇಂದ್ರದಲ್ಲಿ ಪ್ರತಿ ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯನ್ನು ಮಾತ್ರ ಕೂರಿಸಲು ಅವಕಾಶವಿದ್ದು, ವಿದ್ಯಾರ್ಥಿಯಿಂದ ವಿದ್ಯಾರ್ಥಿಗೆ ಅಂತರ ಕಾಯ್ದುಕೊಳ್ಳಬೇಕು’ ಎಂದು ಹೇಳಿದರು.
‘ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತದಳ ಇರಲಿದ್ದು, ತಾಲ್ಲೂಕು ಮತ್ತು ಜಿಲ್ಲಾ ಹಂತದ ಜಾಗೃತ ದಳಗಳು, ರಾಜ್ಯದಿಂದಲೂ ದಳ ಬರಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ನೀಡಲಾಗಿದ್ದು, ಕೊಠಡಿ ಮೇಲ್ವಿಚಾರಕರು ಜವಾಬ್ದಾರಿ ಅರಿತು ಕೆಲಸ ಮಾಡಿ’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.