ADVERTISEMENT

ಕೋಲಾರ: ಕುರುಬ ಸಮುದಾಯದ ಸಂಘಟನೆ ಬಲಪಡಿಸಿ; ಮುನಿಯಪ್ಪ ಸಲಹೆ

ಸಭೆಯಲ್ಲಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 13:20 IST
Last Updated 26 ಸೆಪ್ಟೆಂಬರ್ 2020, 13:20 IST
ಕೋಲಾರದಲ್ಲಿ ಶನಿವಾರ ನಡೆದ ಜಿಲ್ಲಾ ಕುರುಬರ ಸಂಘದ ಸಭೆಯಲ್ಲಿ ಸಮುದಾಯದ ಮುಖಂಡರು ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.
ಕೋಲಾರದಲ್ಲಿ ಶನಿವಾರ ನಡೆದ ಜಿಲ್ಲಾ ಕುರುಬರ ಸಂಘದ ಸಭೆಯಲ್ಲಿ ಸಮುದಾಯದ ಮುಖಂಡರು ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.   

ಕೋಲಾರ: ‘ಜಿಲ್ಲೆಯಲ್ಲಿ ಕುರುಬ ಸಮುದಾಯದ ಸಂಘಟನೆ ಬಲಪಡಿಸಬೇಕು’ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮುನಿಯಪ್ಪ ಹೇಳಿದರು.

ಇಲ್ಲಿ ಶನಿವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕುರುಬ ಸಮುದಾಯದ ಜನಸಂಖ್ಯೆ ಹೆಚ್ಚಿದೆ. ಸಮುದಾಯದವರು ರಾಜಕೀಯವಾಗಿ ಹಾಗೂ ಶೈಕ್ಷಣಿಕವಾಗಿ ಸಾಧನೆ ಮಾಡಬೇಕು. ಸಮುದಾಯದಲ್ಲಿನ ಸ್ಥಿತಿವಂತರು ಬಡ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಬೇಕು’ ಎಂದು ತಿಳಿಸಿದರು.

‘ಪ್ರತಿ ವರ್ಷದಂತೆ ಈ ಬಾರಿಯು ಸಮುದಾಯದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಹಿಂದಿನ ವರ್ಷ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸುಮಾರು 300 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗಿತ್ತು’ ಎಂದು ಮಾಹಿತಿ ನೀಡಿದರು.

ADVERTISEMENT

‘ಈ ವರ್ಷ ಎಲ್ಲಾ ತಾಲ್ಲೂಕುಗಳ ಮಟ್ಟದಲ್ಲಿ ಸಮುದಾಯದ ಅಧ್ಯಕ್ಷರು ಸಭೆ ನಡೆಸಿ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಬೇಕು. ನಂತರ ಜಿಲ್ಲಾ ಮಟ್ಟದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ’ ಎಂದು ವಿವರಿಸಿದರು.

‘ಸಂಘದ ಸದಸ್ಯತ್ವ ಅಭಿಯಾನ ಆರಂಭಿಸಬೇಕು. ಸದಸ್ಯರ ಷೇರು ಹಣದ ಒಂದು ಭಾಗದಲ್ಲಿ ಶಿಕ್ಷಣ ನಿಧಿ ಸ್ಥಾಪಿಸಿ ಸಮುದಾಯದ ಬಡ ಮಕ್ಕಳ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುವುದು. ಮುಂದಿನ ದಿನಗಳಲ್ಲಿ ಸದಸ್ಯರು ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಬಹುದು. ಸಮುದಾಯದ ಹಾಸ್ಟೆಲ್ ಹಾಗೂ ಕನಕ ಭವನ ನಿರ್ಮಾಣ ಸಮಿತಿ ರಚಿಸಲಾಗುತ್ತದೆ’ ಎಂದು ಹೇಳಿದರು.

ನಿವೇಶನಕ್ಕೆ ಮನವಿ: ‘ಕನಕ ಭವನ ನಿರ್ಮಾಣಕ್ಕೆ ನಗರಸಭೆ ಅಥವಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳ ಬಳಿ ಸಮುದಾಯದ ಮುಖಂಡರ ನಿಯೋಗ ಕರೆದೊಯ್ದು ಮನವಿ ಮಾಡಬೇಕು’ ಎಂದು ನಗರಸಭೆ ಸದಸ್ಯ ಪ್ರಸಾದ್‌ಬಾಬು ಸಲಹೆ ನೀಡಿದರು.

ಸಭೆಯಲ್ಲಿ ಎಸ್‌.ಪಿ.ಬಾಲಸುಬ್ರಮಣ್ಯಂ ಸ್ಮರಣಾರ್ಥ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಅಪ್ಪೇಗೌಡ, ಕೆ.ಎನ್.ಸರಸ್ವತಮ್ಮ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ವೇಮಣ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.