ADVERTISEMENT

ಕೋಲಾರ: ಎಸ್ಸೆಸ್ಸೆಲ್ಸಿಯಲ್ಲಿ ಪ್ರಥಮ ಸ್ಥಾನಕ್ಕೇರಲು ಶ್ರಮಿಸಿ

ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಜಿ.ಪಂ ಸಿಇಒ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 4:27 IST
Last Updated 17 ಫೆಬ್ರುವರಿ 2021, 4:27 IST
ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮುಖ್ಯಕಾರ್ಯ ನಿರ್ವಹಣಾಧಿಕಾರಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು
ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮುಖ್ಯಕಾರ್ಯ ನಿರ್ವಹಣಾಧಿಕಾರಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು   

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸುವ ಮೂಲಕ ಜಿಲ್ಲೆ ಪ್ರಥಮ ಸ್ಥಾನ ಪಡೆಯಬೇಕು. ಬದ್ಧತೆಯಿಂದ ಕೆಲಸ ಮಾಡಿ, ಶಿಕ್ಷಕರಿಗೆ ಪ್ರೇರಣೆಯಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಎಂ.ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಮತ್ತು ಶಾಲೆಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಪರಿಶೀಲನೆ ಕುರಿತಂತೆ ಚರ್ಚಿಸಲು ಕರೆದಿದ್ದ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಅನುದಾನಿತ, ಖಾಸಗಿ ಶಾಲೆ ಸೇರಿದಂತೆ ಎಲ್ಲಾ ಶಾಲೆಗಳು ಶೇ 100ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಮುಖ್ಯಶಿಕ್ಷಕರು, ಶಿಕ್ಷಕರು ಕಾರ್ಯಯೋಜನೆ ರೂಪಿಸಿಅನುಷ್ಠಾನ ಮಾಡಬೇಕು ಎಂದರು.

ADVERTISEMENT

ದ್ವಿತೀಯ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್, ಗಣಿತ, ವಿಜ್ಞಾನ ವಿಷಯಗಳಲ್ಲಿ ಫಲಿತಾಂಶ ಕ್ಷೀಣಿಸಿದೆ. ಸದರಿ ವಿಷಯಗಳಿಗೆ ಆದ್ಯತೆ ನೀಡಬೇಕು. ತೆರೆದ ಪುಸ್ತಕ ಪರೀಕ್ಷೆ ನಡೆಸುವ ಮೂಲಕ ಮಕ್ಕಳಲ್ಲಿ ಬರವಣಿಗೆ ಕೌಶಲ ವೃದ್ಧಿಸಬೇಕು ಎಂದು ಸೂಚನೆ ನೀಡಿದರು.

ಕಲಿಕೋಪಕರಣಗಳ ಬಳಕೆಗೆ ಒತ್ತು ನೀಡಿ, ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸಿ, ಶಾಲೆಗಳಲ್ಲಿ ಕಲಿಕಾ ವಾತಾವರಣ ನಿರ್ಮಿಸಬೇಕು. ಶಾಲೆಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ನೀರಿನ ವ್ಯವಸ್ಥೆ, ಕಾಂಪೌಂಡ್ ಇತ್ಯಾದಿ ಕಲ್ಪಿಸಲು ಕ್ರಮವಹಿಸಬೇಕು. ಸೌಲಭ್ಯಕ್ಕಾಗಿ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಎಂದು ಹೇಳಿದರು.

ಪಠ್ಯ ಪುನರಾವರ್ತನೆಗೆ ಒತ್ತು ನೀಡಿ, ಪಠ್ಯಪುಸ್ತಕ ಓದಿಗೆ ವಿಶೇಷ ಗಮನ ನೀಡಬೇಕು. ವಿದ್ಯಾರ್ಥಿಗಳ ಅಭಿವ್ಯಕ್ತಿ ಸಾಮರ್ಥ್ಯ ಬೆಳೆಸಲು ಕ್ರಮವಹಿಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಗಮನ ನೀಡಬೇಕು ಎಂದು ತಿಳಿಸಿದರು.

ತಾಲ್ಲೂಕು ಹಂತದಲ್ಲಿ ವಿಷಯವಾರು ಶಿಕ್ಷಕರ ಸಭೆ ಕರೆದು ಸಮಾಲೋಚನೆ ಮಾಡಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಿ, ಪುನಶ್ಚೇತನಗೊಳಿಸಲು ಕಿವಿಮಾತು ಹೇಳಿದರು.

ಮುಖ್ಯಶಿಕ್ಷಕರು ಕನಿಷ್ಠ 3 ತರಗತಿ ಬೋಧನೆ ಪರಿವೀಕ್ಷಣೆ ಮಾಡಿ ಸಲಹೆ, ಮಾರ್ಗದರ್ಶನ ನೀಡಬೇಕು. ವಿದ್ಯಾರ್ಥಿಗಳ ಹಾಜರಾತಿ ಉತ್ತಮಪಡಿಸಲು ಕ್ರಮವಹಿಸಿ, ಸಾಮಾಜಿಕ ಅನಿಷ್ಟಗಳಾದ ಬಾಲ್ಯವಿವಾಹ, ಜೀತಪದ್ಧತಿ ತಡೆಗೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಮಗ್ರ ಶಿಕ್ಷಣ ಯೋಜನೆಯಡಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸಿ ಪ್ರಮಾಣಪತ್ರ ನೀಡಬೇಕು. ಶಾಲೆಗಳಲ್ಲಿ ಕಿಚನ್ಗಾರ್ಡನ್, ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ದುರಸ್ತಿ, ಅಗತ್ಯವಿರುವ ಶಾಲೆಗಳನ್ನು ಶಾಸಕರ ಅನುದಾನಕ್ಕೆ ಒಳಪಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಡಿಡಿಪಿಐ ಕೃಷ್ಣಮೂರ್ತಿ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ಬಿಇಒಗಳಾದ ಕೆ.ಎಸ್.ನಾಗರಾಜಗೌಡ, ಬಿ.ಪಿ.ಕೆಂಪಯ್ಯ, ಗಿರಿಜೇಶ್ವರಿದೇವಿ, ಚಂದ್ರಶೇಖರ್, ಡಿವೈಪಿಸಿ ಗಂಗರಾಮಯ್ಯ, ಎವೈಪಿಸಿಗಳಾದ ಸಿದ್ದೇಶ್, ಮೋಹನ್ ಬಾಬು, ವಿಷಯ ಪರಿವೀಕ್ಷಕರಾದ ಗಾಯತ್ರಿ, ಶಶಿವಧನ, ಕೃಷ್ಣಪ್ಪ, ಬಿ.ವೆಂಕಟೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.