ADVERTISEMENT

ಕೋಲಾರ: ಸರ್ವೇಯರ್ ಮೇಲೆ ಹಲ್ಲೆ; ಕ್ರಮಕ್ಕೆ ನೌಕರರ ಸಂಘ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:54 IST
Last Updated 14 ಡಿಸೆಂಬರ್ 2025, 6:54 IST
   

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಸರ್ವೇಗೆ ಸಂಬಂಧಿಸಿದಂತೆ ನೋಟಿಸ್ ನೀಡಲು ತೆರಳಿದ್ದ ಸಂದರ್ಭದಲ್ಲಿ ಸರ್ವೇಯರ್ ಚಂದ್ರಶೇಖರ್ ಎಂಬುವರ ಮೇಲೆ ಹಲ್ಲೆ ನಡೆಸಿರುವ ರಿಯಲ್ ಎಸ್ಟೇಟ್ ಮಧ್ಯವರ್ತಿ ಅಕ್ರಂ ಪಾಷ ಎಂಬಾತನನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಅಜಯ್ ಕುಮಾರ್ ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ‌ ಮಾಡಿರುವ ಅವರು, ‘ಕರ್ತವ್ಯನಿರತ ನೌಕರರ ಮೇಲೆ ನಿರಂತರವಾಗಿ ಹಲ್ಲೆ,‌ ದೌರ್ಜನ್ಯ ನಡೆಯುತ್ತಿದೆ. ಸಣ್ಣಪುಟ್ಟ ಕಾರಣಗಳಿಗಾಗಿ ಪದೇಪದೇ ಇಂಥ ಕೃತ್ಯ ಸಂಭವಿಸುತ್ತಿರುವುದನ್ನು ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ. ಈಚೆಗೆ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ.

ಇಂತಹ ಘಟನೆಗಳು ಪದೇಪದೇ ನಡೆಯುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ, ಆರೋಗ್ಯ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಕೆಲಸ ಮಾಡಲು ಯಾರೂ ಮುಂದೆ ಬರುತ್ತಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಸರ್ಕಾರ ಕಾನೂನು ರೂಪಿಸಿ ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕು‌. ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂಥ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಸರ್ವೆ ಕಾರ್ಯದಂಥ ಸಂದರ್ಭದಲ್ಲಿ ಪೋಲಿಸ್ ಇಲಾಖೆಯಿಂದ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.