ADVERTISEMENT

ಪ್ರತಿಭೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ

ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2019, 10:17 IST
Last Updated 30 ನವೆಂಬರ್ 2019, 10:17 IST
ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭರತನಾಟ್ಯ ನೃತ್ಯ ಪ್ರದರ್ಶಿಸಿದರು.
ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭರತನಾಟ್ಯ ನೃತ್ಯ ಪ್ರದರ್ಶಿಸಿದರು.   

ಕೋಲಾರ: ‘ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಾಗ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಈ ನೆಲ ಈ ಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ದೇಶದ ಸಾಂಸ್ಕೃತಿಕ ಕ್ಷೇತ್ರದ ರಾಯಭಾರಿಗಳಾಗಿ ಯುವ ಸಮುದಾಯ ಮುಂದೆ ಬರಬೇಕು’ ಎಂದು ಸಲಹೆ ನೀಡಿದರು.

‘ಪ್ರತಿಭೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ, ದೇಶದ ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ಸಿರಿವಂತಿಕೆಯನ್ನು ಹೊಂದಿದೆ, ಇದನ್ನು ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ. ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ಗ್ರಾಮೀಣ ಯುವಜನರಲ್ಲಿ ಇರುವ ವಿವಿಧ ಸಾಂಸ್ಕೃತಿಕ ಜಾನಪದ ಕಲೆ ಮತ್ತು ದೇಶಿಯ ಕ್ರೀಡೆಗಳನ್ನು ಗುರುತಿಸಿ, ಅವರನ್ನು ಎಲ್ಲಾ ರೀತಿಯಿಂದ ಸಶಕ್ತರನ್ನಾಗಿಸಲು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದರಿಂದ ಶೈಕ್ಷಣಿಕ ಪ್ರಗತಿ ಕಾಣಬಹುದು’ ಎಂದರು.

ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ‘ಹಳ್ಳಿಯಿಂದ ಬರುವ ಮಕ್ಕಳಿಗೆ ಕಲೆ ಇದೆ, ಆದರೆ ಅದನ್ನು ಹೊರಹಾಕಲು ಅವರಿಗೆ ಸರಿಯಾದ ಅವಕಾಶಗಳು ಸಿಗುತ್ತಿಲ್ಲ. ಅಂತಹ ಮಕ್ಕಳಿಗೆ ಯುವಜನೋತ್ಸವ ಉತ್ತಮ ವೇದಿಕೆಯಾಗಬೇಕು’ ಎಂದು ಹೇಳಿದರು.

‘ಕಲೆ ಯಾರ ಸ್ವತ್ತು ಅಲ್ಲ, ಜಿಲ್ಲೆಯಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ, ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು, ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರಾಜ್ಯ ಮತ್ತು ರಾಷ್ಟ್ರಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಆಯ್ಕೆಯಾಗಬೇಕು’ ಎಂದು ತಿಳಿಸಿದರು.

ಯುವಜನೋತ್ಸವದಲ್ಲಿ ಸಂಗೀತ ನೃತ್ಯ, ಸಂಗೀತ ನೃತ್ಯ, ಭರತನಾಟ್ಯ, ಕುಚುಪುಡಿ, ಶಾಸ್ತ್ರೀಯ ವಾದ್ಯ ಸೇರಿದಂತೆ ವಿವಿಧ 11 ಸ್ಪರ್ಧೆಗಳು ನಡೆಯಿತು, ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಣ್ಣ, ನಗರಸಭೆ ಸದಸ್ಯೆ ನಾರಾಯಣಮ್ಮ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಎಂ.ಎಲ್.ದೇವಿಕಾ, ಈನೆಲ ಈಜಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಬಿ.ವೆಂಕಟಾಚಲಪತಿ, ಕಲಾವಿದರಾದ, ಕೃಷ್ಣಮೂರ್ತಿ, ಕೃಷ್ಣ,ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.