ADVERTISEMENT

ನಾಳೆ ಪ್ರತಿಭಾ ಪುರಸ್ಕಾರ ಸಮಾರಂಭ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 11:51 IST
Last Updated 2 ಆಗಸ್ಟ್ 2019, 11:51 IST

ಕೋಲಾರ: ‘ಸಮಿತಿ ವತಿಯಿಂದ ನಗರದ ಪತಂಜಲಿ ಯೋಗ ಮಂದಿರದಲ್ಲಿ ಆ.4ರಂದು ಬೆಳಿಗ್ಗೆ 10.30ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ಉಪಾಧ್ಯಕ್ಷ ಜನಾರ್ದನ್‌ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ 120 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಶೇ 85 ಹಾಗೂ ಖಾಸಗಿ ಶಾಲೆಯಲ್ಲಿ ಶೇ 95ಕ್ಕೂ ಹೆಚ್ಚು ಅಂಕ ಗಳಿಸಿರುವ ಮಕ್ಕಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರ್ಕಾರಿ ಕಾಲೇಜಿನಲ್ಲಿ ಶೇ 85 ಮತ್ತು ಖಾಸಗಿ ಕಾಲೇಜಿನಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಗಳಿಸುವ ಮಕ್ಕಳನ್ನು ಪುರಸ್ಕರಿಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ದ್ವಿತೀಯ ಪಿಯುಸಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಇಬ್ಬರು ವಿದ್ಯಾರ್ಥಿಗಳು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮತ್ತು ಕೇಂದ್ರೀಯ ಪಠ್ಯಕ್ರಮದಲ್ಲಿ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು’ ಎಂದು ವಿವರಿಸಿದರು.

‘ಸಂಸದ ಎಸ್.ಮುನಿಸ್ವಾಮಿ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿಸಪ್ಪಗೌಡ ಅಧ್ಯಕ್ಷತೆ ವಹಿಸುತ್ತಾರೆ. ತುಮಕೂರು ಪ್ರಾಂತ ಸಂಚಾಲಕ ಆರ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್, ಕೇಂದ್ರೀಯ ತೆರಿಗೆ ಸಹಾಯಕ ಆಯುಕ್ತ ಬೈರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ’ ಎಂದು ಮಾಹಿತಿ ನೀಡಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿಸಪ್ಪಗೌಡ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಸಂಚಾಲಕ ಮಾರ್ಕಂಡೇಯ, ವಲಯ ಸಂಚಾಲಕಿ ಲೀಲಾವತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.