ADVERTISEMENT

ಅಗತ್ಯ ವಸ್ತು ಪೂರೈಕೆಗೆ ತಂಡ ರಚನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 12:10 IST
Last Updated 30 ಮಾರ್ಚ್ 2020, 12:10 IST

ಕೋಲಾರ: ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಬರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ದಿನಬಳಕೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ನಗರಸಭೆ ಆಯುಕ್ತ ಆರ್‌.ಶ್ರೀಕಾಂತ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ಹಾಗೂ ಏ.14ರವರೆಗೆ ಸಾರ್ವಜನಿಕರು ಮನೆಯಿಂದ ಹೊರ ಬರದಂತೆ ತಡೆಯುವ ಉದ್ದೇಶಕ್ಕೆ ನಗರಸಭೆ ಸಿಬ್ಬಂದಿ, ಮೇಸ್ತ್ರಿಗಳು, ವಾಲ್‌ಮನ್‌ಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ತಂಡಗಳು ಜನರಿಗೆ ಅತ್ಯಗತ್ಯವಾಗಿ ಬೇಕಾದ ಆಹಾರ ಪದಾರ್ಥ, ತರಕಾರಿ, ಹಾಲು ಸೇರಿದಂತೆ ದಿನನಿತ್ಯದ ಬಳಕೆಯ ವಸ್ತುಗಳನ್ನು ಪೂರೈಸಲಿವೆ. ಅಗತ್ಯ ವಸ್ತುಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಈ ತಂಡಗಳು ಎಚ್ಚರ ವಹಿಸಲಿವೆ. ನಗರವಾಸಿಗಳು ಈ ತಂಡಗಳ ಮುಖ್ಯಸ್ಥರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸೇವೆ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ನಿಯಂತ್ರಣ ಕೊಠಡಿ: ಕೊರೊನಾ ಸೋಂಕು ತಡೆಗಾಗಿ ದೇಶದೆಲ್ಲೆಡೆ ದಿಗ್ಬಂಧನ ಘೋಷಣೆಯಾಗಿರುವ ಕಾರಣ ಜನರಿಗೆ ಅಗತ್ಯವಿರುವ ದಿನನಿತ್ಯದ ಬಳಕೆಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರ ವಹಿಸಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯು ನಿಯಂತ್ರಣ ಕೊಠಡಿ ತೆರೆದಿದೆ.

ಅಗತ್ಯ ವಸ್ತುಗಳ ಸಾಗಾಣಿಕೆಯಲ್ಲಿ ಸಮಸ್ಯೆಯಾದರೆ ಅಥವಾ ಜನರಿಗೆ ಅಗತ್ಯ ಸರಕು ಸಾಮಗ್ರಿಗಳು ಸಿಗದಿದ್ದರೆ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 08152 243521ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಇಲಾಖೆ ಉಪ ನಿರ್ದೇಶಕ ನಾಗರಾಜ್‌ ಕೆಳಗಿನಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.