ಕೋಲಾರ: ಕೋಲಾರದಲ್ಲಿ ಬಿಜೆಪಿ ಮುಖಂಡರ ಥಾರ್ ಕಾರು ಸಂಪೂರ್ಣ ‘ಆಪರೇಷನ್ ಸಿಂಧೂರ’ಮಯವಾಗಿದೆ.
ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತದ ಯೋಧರು ಪಾಕಿಸ್ತಾನದಲ್ಲಿರುವ ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಕಾರ್ಯಾಚರಣೆ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ.
ಇಂಥ ಹೊತ್ತಿನಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ತಮ್ಮ ಥಾರ್ ಕಾರಿನ ತುಂಬಾ ‘ಆಪರೇಷನ್ ಸಿಂಧೂರ’ಕ್ಕೆ ಸಂಬಂಧಿಸಿದ ಸ್ಟಿಕ್ಕರ್ ಅಂಟಿಸಿಕೊಂಡಿದ್ದು, ನೋಡುಗರ ಗಮನ ಸೆಳೆಯುತ್ತಿದೆ. ಹಲವರು ಈ ಕಾರಿನ ಮುಂದೆ ನಿಂತು ಫೋಟೊ ತೆಗೆಸಿಕೊಳ್ಳುವುದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಮಾಡುತ್ತಿದ್ದಾರೆ.
ವಾಯುದಾಳಿ ನಡೆಸಿದ ಕ್ಪಿಪಣಿಗಳ ಚಿತ್ರ, ಕಮಾಂಡರ್‌ಗಳ ಭಾವಚಿತ್ರ, ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಭಾವಚಿತ್ರಗಳು ಕಾರಿನ ಮೇಲಿವೆ.
‘ನಮ್ಮೆಲ್ಲರ ಒಳಿತಿಗಾಗಿ ಯೋಧರು ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಬುದ್ಧಿ ಕಲಿಸಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನ ಕಾರ್ಯಾಚರಣೆಯಲ್ಲಿ ಭಾರತದ ಸೈನಿಕರು ಜೀವದ ಹಂಗು ತೊರೆದು ಹೋರಾಟ ನಡೆಸಿದ್ದಾರೆ. ಅವರ ಗೌರವಾರ್ಥ ನನ್ನ ಕಾರಿಗೆ ಸ್ಟಿಕ್ಕರ್ ಅಂಟಿಸಿಕೊಂಡಿದ್ದೇನೆ’ ಎಂದು ಓಂಶಕ್ತಿ ಚಲಪತಿ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.