ADVERTISEMENT

ಬಿಜೆಪಿ ಸರ್ಕಾರ ಬಡವರ ವಿರೋಧಿ

ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ನಾರಾಯಣಸ್ವಾಮಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 6:16 IST
Last Updated 26 ಅಕ್ಟೋಬರ್ 2020, 6:16 IST
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ತಾಲ್ಲೂಕಿನ ಅಜ್ಜಪ್ಪನಹಳ್ಳಿ ಬಳಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿದರು.
ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರ ತಾಲ್ಲೂಕಿನ ಅಜ್ಜಪ್ಪನಹಳ್ಳಿ ಬಳಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿದರು.   

ಕೋಲಾರ: ‘ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ’ ಎಂದು ಜಿಲ್ಲೆಯ ಬಂಗಾರಪೇಟೆ ಕಾಂಗ್ರೆಸ್‌ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಅಜ್ಜಪ್ಪನಹಳ್ಳಿ ಬಳಿ ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಪ್ರಧಾನಿ ಮೋದಿ ಅವರು ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗಾವಕಾಶ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, 2 ಕೋಟಿಗೂ ಹೆಚ್ಚು ನಿರುದ್ಯೋಗಿಗಳನ್ನು ಸೃಷ್ಟಿಸಿದ್ದೆ ಅವರ ಸಾಧನೆ’ ಎಂದು ವ್ಯಂಗ್ಯವಾಡಿದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರನ್ನು ಯಾಮರಿಸುತ್ತಾ ದುರಾಡಳಿತ ನಡೆಸುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೋವಿಡ್‌ ಸಂದರ್ಭ ಬಳಸಿಕೊಂಡು ಸುಗ್ರೀವಾಜ್ಞೆ ಮೂಲಕ ಜನ ವಿರೋಧಿ ಕಾಯ್ದೆ ಜಾರಿಗೊಳಿಸುತ್ತಿವೆ. ಕೊರೊನಾ ಸೋಂಕಿನ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿವೆ’ ಎಂದು ಆರೋಪಿಸಿದರು.

ADVERTISEMENT

‘ಬಿಜೆಪಿಯ ದುರಾಡಳಿತದಿಂದ ಬೇಸತ್ತಿರುವ ಜನರು ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಕಾಂಗ್ರೆಸ್‌ನಿಂದ ಮಾತ್ರ ಜನರ ಹಿತರಕ್ಷಣೆ ಸಾಧ್ಯ. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಮೋದಿ ವಿಫಲ: ‘ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿಯ ದುರಾಡಳಿತದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ಮೋದಿಯವರು ಚುನಾವಣೆ ಪೂರ್ವದಲ್ಲಿ ಕೊಟ್ಟ ಆಶ್ವಾಸನೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಟೀಕಿಸಿದರು.

ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್, ಕಾಂಗ್ರೆಸ್‌ ಜಿಲ್ಲಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲಗೌಡ, ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಎಸ್.ಮಂಜುನಾಥ್, ಪಕ್ಷದ ಮುಖಂಡರಾದ ಮುನಿವೆಂಕಟಪ್ಪ, ಸಿ.ಎಂ.ನಾರಾಯಣಸ್ವಾಮಿ, ಸಂತೋಷ್, ಎ.ಸದಾನಂದ್, ನಾಗಭೂಷಣ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.