ADVERTISEMENT

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 15:02 IST
Last Updated 13 ಅಕ್ಟೋಬರ್ 2020, 15:02 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಓಟ ಮುಂದುವರಿದಿದ್ದು, ಮಂಗಳವಾರ 3 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 122ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 85 ಮಂದಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,525ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 33 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಮಾಲೂರು ತಾಲ್ಲೂಕಿನ 6, ಬಂಗಾರಪೇಟೆ ತಾಲ್ಲೂಕಿನ 7, ಕೆಜಿಎಫ್‌ ತಾಲ್ಲೂಕಿನ 12, ಮುಳಬಾಗಿಲು ತಾಲ್ಲೂಕಿನ 14 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಗೆ ಸೋಂಕು ಬಂದಿದೆ.

108 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 108 ಮಂದಿ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 50 ಮಂದಿ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 15 ಮಂದಿ, ಕೆಜಿಎಫ್‌ ತಾಲ್ಲೂಕಿನ 18, ಮುಳಬಾಗಿಲು ತಾಲ್ಲೂಕಿನ 8 ಹಾಗೂ ಬಂಗಾರಪೇಟೆ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.