ADVERTISEMENT

ಕೋಲಾರ: ಇಂದು ಬಂದ್, ಪೊಲೀಸ್‌ ಕಟ್ಟೆಚ್ಚರ

ಮರಾಠ ಅಭಿವೃದ್ಧಿ ನಿಗಮ ರಚನೆಗೆ ಕನ್ನಡಪರ ಸಂಘಟನೆಗಳ ವಿರೋಧ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 15:18 IST
Last Updated 4 ಡಿಸೆಂಬರ್ 2020, 15:18 IST

ಕೋಲಾರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಶನಿವಾರ (ಡಿ.5) ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಬಂದ್‌ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು, ರೈಲು ನಿಲ್ದಾಣಗಳು, ಕೇಂದ್ರ ಸರ್ಕಾರಿ ಕಚೇರಿಗಳು, ವಾಣಿಜ್ಯ ಸ್ಥಳಗಳು ಹಾಗೂ ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಮತ್ತು ಹಸಿರು ಸೇನೆ, ಕನ್ನಡ ಚಳವಳಿ ವಾಟಾಳ್‌ ಪಕ್ಷ, ಆಟೊ ಚಾಲಕರು ಮತ್ತು ಮಾಲೀಕರ ಸಂಘ, ಹೋಟೆಲ್‌ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಚಾಲಕರು ಮತ್ತು ಮಾಲೀಕರ ಸಂಘವು ಬಂದ್‌ಗೆ ಬೆಂಬಲ ಸೂಚಿಸಿದ್ದು, ಸಂಚಾರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ADVERTISEMENT

ಹಾಲು, ತರಕಾರಿ, ದಿನಸಿ ಹಾಗೂ ಔಷಧ ಮಾರಾಟ ಮಳಿಗೆಗಳು ಎಂದಿನಂತೆ ತೆರೆಯಲಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೇವೆ ಒದಗಿಸಲಿವೆ. ಪೆಟ್ರೋಲ್‌ ಬಂಕ್‌, ಬ್ಯಾಂಕ್‌ಗಳಲ್ಲಿ ಪ್ರತಿನಿತ್ಯದಂತೆ ವಹಿವಾಟು ನಡೆಯಲಿದೆ.

ಶಾಂತಿಯುತವಾಗಿ ಬಂದ್‌ ನಡೆಸಬೇಕು. ಬಸ್‌ಗಳ ಮೇಲೆ ಕಲ್ಲು ತೂರುವ, ಸರ್ಕಾರಿ ಕಚೇರಿಗಳನ್ನು ಬಲವಂತವಾಗಿ ಮುಚ್ಚಿಸುವ ಪ್ರಯತ್ನ ಮಾಡಬಾರದು. ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಪೊಲೀಸರು ಸಂಘಟನೆಗಳ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ವಹಿವಾಟು ಸ್ಥಗಿತಗೊಳಿಸಿದರೆ ಅಭ್ಯಂತರವಿಲ್ಲ. ಆದರೆ, ಸಂಘಟನೆಗಳ ಮುಖಂಡರು ಬಲವಂತವಾಗಿ ಅಂಗಡಿ ಮುಚ್ಚಿಸುವಂತಿಲ್ಲ ಹಾಗೂ ವಾಹನಗಳನ್ನು ಅಡ್ಡಗಟ್ಟುವಂತಿಲ್ಲ ಎಂದು ಪೊಲೀಸರು ಸೂಚಿಸಿದ್ದಾರೆ.

‘ಬಂದ್‌ಗೆ ಯಾವುದೇ ಸಂಘಟನೆಗಳು ಅನುಮತಿ ಕೋರಿಲ್ಲ. ಜಿಲ್ಲೆಯಲ್ಲಿ ಶನಿವಾರ ಪ್ರತಿನಿತ್ಯದಂತೆ ವಾಣಿಜ್ಯ ಚಟುವಟಿಕೆ ನಡೆಯಲಿವೆ. ಸರ್ಕಾರಿ ಕಚೇರಿಗಳು ತೆರೆಯಲಿದ್ದು, ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಸಹ ಇರುತ್ತದೆ. ಬಂದ್‌ ನೆಪದಲ್ಲಿ ಜನಜೀವನಕ್ಕೆ ಸಮಸ್ಯೆ ಮಾಡಿದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.