ADVERTISEMENT

ಧಾರಾಕಾರ ಮಳೆ: ರೈತರಿಗೆ ಸಂತಸ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:48 IST
Last Updated 16 ಮೇ 2022, 15:48 IST

ಕೋಲಾರ: ಜಿಲ್ಲೆಯಾದ್ಯಂತ ಸೋಮವಾರ ಧಾರಾಕಾರ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಕೋಲಾರ, ಶ್ರೀನಿವಾಸಪುರ, ಮುಳಬಾಗಿಲು, ಮಾಲೂರು, ಕೆಜಿಎಫ್‌ ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಜಮೀನುಗಳು ಹದವಾಗಿವೆ. ಮತ್ತೊಂದೆಡೆ ವರುಣ ದೇವ ರೈತರಿಗೆ ಕಣ್ಣೀರು ತರಿಸಿದ್ದು, ಮಾವು, ಟೊಮೆಟೊ, ಕೋಸು, ಬೀನ್ಸ್‌, ದಪ್ಪ ಮೆಣಸಿನಕಾಯಿ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ.

ಸಂಜೆ 5.30ರ ಸುಮಾರಿಗೆ ಆರಂಭವಾದ ಮಳೆ ಸುಮಾರು ಒಂದೂವರೆ ತಾಸು ಎಡೆಬಿಡದೆ ಸುರಿಯಿತು. ಆಕಾಶಕ್ಕೆ ತೂತು ಬಿದ್ದಂತೆ ಸುರಿದ ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದಾಗಿ ಚರಂಡಿ ಹಾಗೂ ಮ್ಯಾನ್‌ಹೋಲ್‌ಗಳು ಕ್ಷಣ ಮಾತ್ರದಲ್ಲಿ ಭರ್ತಿಯಾಗಿ ಕೊಳಚೆ ನೀರು ರಸ್ತೆಗಳ ಮೇಲೆ ಹರಿಯಿತು.

ADVERTISEMENT

ಮಳೆಯಿಂದಾಗಿ ಜಿಲ್ಲಾ ಕೇಂದ್ರದ ಹಲವು ಬಡಾವಣೆಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿತು. ಮಳೆಗೆ ರಸ್ತೆಗಳ ಚಿತ್ರಣವೇ ಬದಲಾಯಿತು. ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಗಳು ರಾಡಿಯಾದವು. ರೈಲ್ವೆ ಕೆಳ ಸೇತುವೆಗಳು ಹಾಗೂ ತಗ್ಗು ಪ್ರದೇಶದ ರಸ್ತೆಗಳಲ್ಲಿ ಮಳೆ ನೀರು ನಿಂತು ಜನರಿಗೆ ಸಮಸ್ಯೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.