ADVERTISEMENT

ಕೃಷಿ ಕಾಯ್ದೆ ತಿದ್ದುಪಡಿ ಕೈ ಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:08 IST
Last Updated 26 ಸೆಪ್ಟೆಂಬರ್ 2020, 2:08 IST
ವಿವಿಧ ಕಾಯ್ದೆಗಳ ತಿದ್ದುಪಡಿ ವಾಪಸ್‌ ಪಡೆಯಲು ಆಗ್ರಹಿಸಿ ರೈತ ಸಂಘದಿಂದ ಶುಕ್ರವಾರ ನಂಗಲಿಯ ವಡ್ಡಹಳ್ಳಿಯ ಹೆದ್ದಾರಿ ತಡೆ ನಡೆಸಲಾಯಿತು
ವಿವಿಧ ಕಾಯ್ದೆಗಳ ತಿದ್ದುಪಡಿ ವಾಪಸ್‌ ಪಡೆಯಲು ಆಗ್ರಹಿಸಿ ರೈತ ಸಂಘದಿಂದ ಶುಕ್ರವಾರ ನಂಗಲಿಯ ವಡ್ಡಹಳ್ಳಿಯ ಹೆದ್ದಾರಿ ತಡೆ ನಡೆಸಲಾಯಿತು   

ನಂಗಲಿ: ರೈತ ವಿರೋಧಿ ಎಪಿಎಂಸಿ, ಭೂ ಸುಧಾರಣಾ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದಿಂದ ವಡ್ಡಹಳ್ಳಿಯ ಬಳಿ ಹೆದ್ದಾರಿ ಬಂದ್ ಮಾಡಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ‘ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ಕಾಯ್ದೆಗಳ ಜಾರಿಗೆ ಮುಂದಾಗಿರುವುದು ಕಾರ್ಪೊರೇಟ್ ಕಂಪನಿಗಳ ಪರ ಸರ್ಕಾರ ಇರುವುದನ್ನು ತೋರಿಸುತ್ತದೆ. ಇದರಿಂದ ರೈತರ ಭೂಮಿ ಉಳಿಯುವ ಲಕ್ಷಣವಿಲ್ಲ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಿಂದ ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆಯಾಗಲಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಗೆ ಬರುವಂತಾಗುತ್ತದೆ’ ಎಂದು ಆರೋಪಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಪಾರುಕ್‍ ಪಾಷಾ, ‘ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿವೆ. ಎಪಿಎಂಸಿಯ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಸ್ಥಳೀಯ ಬಂಡವಾಳಶಾಹಿಗಳಿಗೆ ಹಂಚುವ ಹುನ್ನಾರ ನಡೆಸಲಾಗುತ್ತಿದೆ. ವಿದ್ಯುತ್ ಖಾಸಗೀಕರಣ ಮಾಡಿದರೆ ರೈತರಿಗೆ ಸಿಗುತ್ತಿರುವ ಸಬ್ಸಿಡಿ ವಿದ್ಯುತ್ ಸೌಲಭ್ಯ ನಿಲ್ಲುತ್ತದೆ. ಉತ್ಪಾದನಾ ವೆಚ್ಚ ಹೆಚ್ಚಾಗಿ ರೈತರ ಮೇಲೆ ಹೊರೆ ಬೀಳುತ್ತದೆ. ಎಲ್ಲ ಕಾಯ್ದೆಗಳ ತಿದ್ದುಪಡಿ ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಬಳಿಕತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ‌

ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಮುಖಂಡರಾದ ಕಿಶೋರ್, ಆನಂದ್ ರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಈಕಂಬಳ್ಳಿ ಮಂಜುನಾಥ್, ನವೀನ್, ವಿಜಯಪಾಲ್, ಮೂರ್ತಿ, ಸುಪ್ರೀಂಚಲ, ಶಿವ, ಸುಧಾಕರ್, ನಾರಾಯಣ್, ವಿನೋದ್, ಅನಿಲ್, ರವಿ, ಅಣ್ಣಹಳ್ಳಿ ನಾಗರಾಜ್, ನಾಗೇಶ್, ಧರ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.