ADVERTISEMENT

ದಲಿತರ ಮೇಲಿನ ದೌರ್ಜನ್ಯ: 12ಕ್ಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 15:43 IST
Last Updated 10 ಆಗಸ್ಟ್ 2021, 15:43 IST

ಕೋಲಾರ: ‘ದೆಹಲಿಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಎಐಸಿಸಿ ಎಸ್‍ಸಿ ಘಟಕದಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆ.12ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಕೇಂದ್ರ ಹಾಗೂ ದೆಹಲಿ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಇದರಿಂದ ದಲಿತರು ಜೀವ ಭಯದಲ್ಲಿ ಬದುಕುವಂತಾಗಿದೆ. ಸರ್ಕಾರಗಳಿಗೆ ದಲಿತರ ಬಗ್ಗೆ ಕಾಳಜಿಯಿಲ್ಲ’ ಎಂದು ಆರೋಪಿಸಿದರು.

‘ಬಿಜೆಪಿಯು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದಲಿತರಿಗೆ ರಕ್ಷಣೆ ಇಲ್ಲವಾಗಿದೆ. ದಲಿತರು, ಆದಿವಾಸಿಗಳ ಮೇಲೆ ದೌರ್ಜನ್ಯ, ಅತ್ಯಾಚಾರ ನಡೆಯುತ್ತಲೇ ಇವೆ. ಬಿಜೆಪಿಯು ದಲಿತರ ಮತ್ತು ಆದಿವಾಸಿಗಳ ಪ್ರಾಣ, ಆಸ್ತಿ ರಕ್ಷಿಸುವಲ್ಲಿ ವಿಫಲವಾಗಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಲಿದ್ದಾರೆ’ ಎಂದರು.

ADVERTISEMENT

‘ದೆಹಲಿಯಲ್ಲಿ ನಡೆದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಪರಿಶಿಷ್ಟ ಸಮುದಾಯದ ನ್ಯಾಯಮೂರ್ತಿಗಳನ್ನು ನೇಮಿಸಬೇಕು, ಎಸ್ಸಿ, ಎಸ್ಟಿ ಸಮುದಾಯದ ಸೇವಾ ಮೀಸಲಾತಿ ನೀತಿಗೆ ಕೇಂದ್ರ ಸರ್ಕಾರದ ಸೇವೆಯಲ್ಲಿನ ನೇರ ನೇಮಕಾತಿ ಮತ್ತು ಹೊರ ಗುತ್ತಿಗೆ ಸೇವೆ ರದ್ದುಗೊಳಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಎಸ್‍ಟಿ ಘಟಕದ ಅಧ್ಯಕ್ಷ ನಾಗರಾಜ್ ಒತ್ತಾಯಿಸಿದರು.

ಮೀಸಲು ನೀತಿ: ‘ಸೇನಾಧಿಕಾರಿಗಳ ನೇಮಕಾತಿಯಲ್ಲಿ ಎಸ್ಸಿ, ಎಸ್ಟಿಗೆ ಮೀಸಲು ನೀತಿ ಜಾರಿಯಾಗಬೇಕು. ಎಸ್ಸಿ–ಎಸ್ಟಿ ಆಯೋಗಕ್ಕೆ ವಿಚಾರಣೆ ನಡೆಸುವ ಮತ್ತು ಶಿಕ್ಷೆ ನೀಡುವ ಅಧಿಕಾರ ನೀಡಬೇಕು. ಕೇಂದ್ರ ಲೋಕಸೇವಾ ಆಯೋಗದಲ್ಲಿ ಪರಿಶಿಷ್ಟ ಅಭ್ಯರ್ಥಿಗಳ ಸಂದರ್ಶನಕ್ಕೆ ಅಂಕ ನೀಡುವಾಗ ನಡೆಯುವ ತಾರತಮ್ಯ ನಿಲ್ಲಬೇಕು. ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ಹೆಚ್ಚಾಗಬೇಕು’ ಎಂದು ಹೇಳಿದರು.

ಕೆಪಿಸಿಸಿ ಎಸ್ಸಿ ವಿಭಾಗದ ಉಪಾಧ್ಯಕ್ಷ ಎಚ್.ವಿ.ಕುಮಾರ್, ಕಾಂಗ್ರೆಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರು, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪ್ರಸಾದ್‌ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.