ಬಂಗಾರಪೇಟೆ: ಇಲ್ಲಿನ ವಿದ್ಯಾರ್ಥಿನಿಯರ ನಿಲಯದಲ್ಲಿ ನೀರಿನ ಕೊರತೆಯಿಂದ ಬೇಸತ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರ ನಿಲಯದಲ್ಲಿ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಿನನಿತ್ಯದ ಅಗತ್ಯಗಳಿಗೂ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕುಡಿಯುವ ನೀರು, ಸ್ನಾನ–ಶೌಚಾಲಯದಂತಹ ಅವಶ್ಯಕತೆಗಳಿಗೆ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ನಿಲಯ ಪಾಲಕರು ಮತ್ತು ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ಸಮಾಜ ಕಲ್ಯಾಣ ಇಲಾಖೆಗೆ ಸೇರಿರುವ ವಿದ್ಯಾರ್ಥಿ ನಿಲಯದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದು, ಪ್ರತಿದಿನ ನೀರಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದೇವೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೀರು ಪೂರೈಸುತ್ತಿಲ್ಲ ಎಂದು ಮಕ್ಕಳು ಬೇಸರ ವ್ಯಕ್ತಪಡಿಸಿದರು.
ನೀರಿಲ್ಲದೆ ಪ್ರತಿನಿತ್ಯ ದೈನಂದಿನ ಕರ್ಮ ಮತ್ತು ಸ್ನಾನ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಕಾಲೇಜು ತರಗತಿಗೆ ಹೋಗಲು ಅಸಾಧ್ಯವಾಗಿದೆ. ಇದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಾರಕವಾಗಿದೆ. ಶುದ್ಧ ಕುಡಿಯುವ ನೀರಿನ ಅಭಾವದಿಂದ ವಿದ್ಯಾರ್ಥಿನಿಯರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ನೀರಿನ ಕೊರತೆಯಿಂದ ಶೌಚಾಲಯಗಳಲ್ಲಿ ನೈರ್ಮಲ್ಯದ ಸಮಸ್ಯೆ ಉಂಟಾಗಿದೆ. ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ಪ್ರತಿಭಟನನಿರತ ವಿದ್ಯಾರ್ಥಿನಿಯರು ದೂರಿದರು.
ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಪುರಸಭೆ ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ ವಿದ್ಯಾರ್ಥಿನಿಯರ ನಿಲಯದಲ್ಲಿನ ನೀರಿನ ಕೊರತೆ ಸಮಸ್ಯೆಯನ್ನು ಸರಿಪಡಿಸಬೇಕು ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.