ADVERTISEMENT

ಕೋಲಾರ: ಆತಂಕವಿಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಿರಿ ಎಂದ ಸಚಿವ ಎಚ್. ನಾಗೇಶ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 14:24 IST
Last Updated 24 ಜೂನ್ 2020, 14:24 IST
ಕೋಲಾರ ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಬುಧವಾರ ನಡೆದ ರಾಜೀವ್‌ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ನರ್ಸ್‌ಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿದರು.
ಕೋಲಾರ ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಬುಧವಾರ ನಡೆದ ರಾಜೀವ್‌ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ನರ್ಸ್‌ಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿದರು.   

ಕೋಲಾರ: ‘ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಿದ್ಧತೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಕಿವಿಮಾತು ಹೇಳಿದರು.

ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಬುಧವಾರ ರಾಜೀವ್‌ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ‘ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸಾಕಷ್ಟು ಸುರಕ್ಷತಾ ಕ್ರಮ ಕೈಗೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ಪೋಷಕರು ಹಾಗೂ ಮಕ್ಕಳು ಭಯಪಡುವ ಅಗತ್ಯವಿಲ್ಲ’ ಎಂದು ಹೇಳಿದರು.

‘ಪೋಷಕರು ಆತಂಕಪಡದೆ ಮಕ್ಕಳಿಗೆ ಧೈರ್ಯ ತುಂಬಿ ಪರೀಕ್ಷೆಗೆ ಕಳುಹಿಸಬೇಕು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ಉಚಿತ ಬಸ್‌ ಸೇವೆ ಕಲ್ಪಿಸಲಾಗಿದೆ. ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ನೀಡಿ, ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು’ ಎಂದು ವಿವರಿಸಿದರು.

ADVERTISEMENT

‘ವಿದ್ಯಾರ್ಥಿಗಳು ಮರೆಯದೆ ಮನೆಯಿಂದಲೇ ಬಿಸಿ ನೀರು ತರಬೇಕು. ಪರೀಕ್ಷಾ ಕೇಂದ್ರಗಳಲ್ಲೂ ಮಕ್ಕಳಿಗೆ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಲಾಗಿದೆ. ಬಿಸಿ ನೀರು ಕುಡಿದರೆ ಸೋಂಕು ಹಿಮ್ಮೆಟ್ಟಿಸಬಹುದು. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಅನಗತ್ಯವಾಗಿ ಗುಂಪುಗೂಡಬಾರದು. ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ’ ಎಂದು ಸಲಹೆ ನೀಡಿದರು.

ಸಿಬ್ಬಂದಿ ಭಯಭೀತ: ‘ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿದೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಭಯಭೀತರಾಗಿದ್ದಾರೆ. ಸೋಂಕಿನ ನಿಯಂತ್ರಣಕ್ಕೆ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ವಡಗೂರು ಗ್ರಾಮದಲ್ಲಿನ ನರ್ಸ್‌ಗಳು ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜನಪ್ಪ, ವಡಗೂರು ಗ್ರಾ.ಪಂ ಅಧ್ಯಕ್ಷೆ ಪದ್ಮಾವತಿ ಹಾಗೂ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.