ADVERTISEMENT

‘ಜನ ಜಾಗೃತಿ ಜಾಥಾ ಕೈಗೊಳ್ಳಿ’

ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ದಿನಾಚರಣೆ 28ರಿಂದ

​ಪ್ರಜಾವಾಣಿ ವಾರ್ತೆ
Published 26 ಮೇ 2018, 13:55 IST
Last Updated 26 ಮೇ 2018, 13:55 IST

ಕೊಪ್ಪಳ: ಜಿಲ್ಲೆಯಲ್ಲಿ ಮೇ 28ರಿಂದ ಜೂನ್ 9 ರವರೆಗೆ ‘ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ’ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಜನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯ ಸ್ಥಾಯಿ ಸಮಿತಿ ಕೊಠಡಿಯಲ್ಲಿ ಶುಕ್ರವಾರ ‘ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ’ ದಿನಾಚರಣೆ ಕುರಿತು ನಡೆದ ಜಿಲ್ಲಾಮಟ್ಟದ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

‘ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಆಚರಣೆ ದಿನದಂದು ಸಾರ್ವತ್ರಿಕ ರಜೆ ಇದ್ದ ವೇಳೆಯೂ ಅಂಗನವಾಡಿ ಕೇಂದ್ರಗಳು ತೆರೆದಿರಬೇಕು. ಎಲ್ಲ ಕಾರ್ಯಕರ್ತರು ಮತ್ತು ಮೇಲ್ವಿಚಾರಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು’ ಎಂದರು.

ADVERTISEMENT

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಅಲಕನಂದಾ ಮಳಗಿ ಮಾತನಾಡಿ, ‘ಅತಿಸಾರ ಭೇಧಿಯಿಂದ ಮಕ್ಕಳ ಮರಣ ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಇತರ ಇಲಾಖೆಯ ಅಧಿಕಾರಿಗಳ ಸಹಕಾರ ಅವಶ್ಯಕವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್‌ ರಾಜ್ಯ ಇಲಾಖೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ಕಾರ್ಯಕ್ರಮದ ಅಡಿ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾದೇಶಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಓಆರ್‌ಎಸ್ ಮತ್ತು ಜಿಂಕ್ ವಿಭಾಗವನ್ನು ತೆರೆದಿರುತ್ತಾರೆ’ ಎಂದರು.

ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, 5 ವರ್ಷದ ಒಳಗಿನ ಮಕ್ಕಳಿಗೆ ಓಆರ್‌ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ವಿತರಣೆ ಮಾಡುತ್ತಾರೆ. ಶಾಲೆಗಳಲ್ಲಿ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಕೈತೊಳೆಯುವ ವಿಧಾನದ ಬಗ್ಗೆ ಮಾಹಿತಿ ನೀಡುವುದು. ಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು ಜನದಟ್ಟಣೆ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು. ನಗರಸಭೆ ಹಾಗೂ ಗ್ರಾಮಪಂಚಾಯಿತಿ ವತಿಯಿಂದ ಕುಡಿಯುವ ನೀರಿನ ಮೂಲಗಳನ್ನು ಶುದ್ಧೀಕರಣಗೊಳಿಸಬೇಕು’ ಎಂದು ಅವರು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯ ಡಾ. ಲಕ್ಷ್ಮಿ ನಾರಾಯಣ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಜಂಬಯ್ಯ, ಕಿಮ್ಸ್ ಎಚ್ಓಡಿ ಡಾ.ಯುವರಾಜ, ಶಿಕ್ಷಣ ಇಲಾಖೆ ಉಪನಿರ್ದೇಶಕ ಹನುಮಂತಪ್ಪ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಮಂಜುನಾಥ, ಲಯನ್ಸ್ ಕ್ಲಬ್‍ನ ಡಾ.ಕೆ.ಜಿ ಕುಲಕರ್ಣಿ, ಡಾ.ರಾಧಾಬಾಯಿ ಕುಲಕರ್ಣಿ ಹಾಜರಿದ್ದರು.

**
ಕಾರ್ಯಕ್ರಮದ ದಿನದಂದು ಎಲ್ಲ ಗ್ರಾಮಗಳಲ್ಲೂ ಅಲ್ಲಿನ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು
ವೆಂಕಟರಾಜಾ, ಸಿಇಒ, ಜಿಲ್ಲಾ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.