ADVERTISEMENT

ಜಿಲ್ಲೆಗೆ ₹ 96. 61ಕೋಟಿ ಬಿಡುಗಡೆ: ಡಿಸಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2017, 5:26 IST
Last Updated 10 ಜೂನ್ 2017, 5:26 IST
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮುಂಗಾರು ಹಂಗಾಮಿನ ಸಿದ್ಧತೆ ಮತ್ತು ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿದರು
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮುಂಗಾರು ಹಂಗಾಮಿನ ಸಿದ್ಧತೆ ಮತ್ತು ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿದರು   

ಕೊಪ್ಪಳ: ಬರ ಪರಿಸ್ಥಿತಿಯಿಂದ ಬೆಳೆ ನಷ್ಟ ಅನುಭವಿಸಿದ ಕಳೆದ ಬಾರಿಯ ಮುಂಗಾರು ಹಂಗಾಮಿನ ರೈತರಿಗೆ ₹96.61 ಕೋಟಿ ಪರಿಹಾರ ಹಣ ಬಿಡುಗಡೆಯಾಗಿದೆ. ಈ ಪೈಕಿ ₹77.61 ಕೋಟಿ ಹಣವನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹೇಳಿದರು.

ಪ್ರಸಕ್ತ ಮುಂಗಾರು ಹಂಗಾಮಿನ ಸಿದ್ಧತೆ ಹಾಗೂ ಮಳೆಗಾಲದಲ್ಲಿ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ 92,435 ಫಲಾನುಭವಿ ರೈತರಿದ್ದಾರೆ. ಬ್ಯಾಂಕ್‌ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯ ತೊಂದರೆ ಸೇರಿದಂತೆ ವಿವಿಧ ಸಮಸ್ಯೆಗಳಿಂದಾಗಿ ಪರಿಹಾರ ಹಣವನ್ನು ಇದುವರೆಗೂ ಪಡೆಯದ ರೈತರಿಗೆ ತೊಂದರೆಯಾಗದಿರಲು ಜಿಲ್ಲಾಧಿಕಾರಿ ಕಚೇರಿಯಿಂದಲೇ ಪರಿಹಾರ ಹಣ ಪಾವತಿಸುವಂತೆ ಸರ್ಕಾರ ಕ್ರಮ ಕೈಗೊಂಡಿದೆ’ ಎಂದರು.

ADVERTISEMENT

₹ 32.54 ಕೋಟಿ ವಿಮೆ ಪರಿಹಾರ: ‘ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ 14,399 ರೈತರಿಗೆ ಮೊದಲ ಹಂತದಲ್ಲಿ ₹ 32.54 ಕೋಟಿ ಪರಿಹಾರ ಪಾವತಿಯಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ವೀರೇಶ ಹುನಗುಂದ ಅವರು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು 38,578 ಟನ್ ಇದೆ. 2,824 ಕ್ವಿಂಟಲ್‌ ಬಿತ್ತನೆ ಬೀಜ ಲಭ್ಯವಿದೆ. ಜಿಲ್ಲೆಯ ಒಟ್ಟು 20 ರೈತ ಸಂಪರ್ಕ ಕೇಂದ್ರಗಳ ಜೊತೆಗೆ ಹೆಚ್ಚುವರಿಯಾಗಿ ಕಿನ್ನಾಳ, ಬೇವೂರು, ತಳಕಲ್‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇಂದರಗಿ, ಹಿರೇಸಿಂಧೋಗಿ, ಚಳಗೇರಾ, ದೋಟಿಹಾಳ ಮತ್ತು ಯರಗೇರಾದಲ್ಲಿ ಹೆಚ್ಚುವರಿ ಕೇಂದ್ರಗಳಿಂದ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.

ಮುಂಗಾರು ಹಂಗಾಮಿನಲ್ಲಿ 6.22 ಲಕ್ಷ ಎಕರೆ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಈವರೆಗೆ 29,084 ಎಕರೆ ಬಿತ್ತನೆಯಾಗಿದೆ’ ಎಂದು ವೀರೇಶ್ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ  ಗುರುದತ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ಕೆ. ತೊರವಿ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ್‌ ಇದ್ದರು.

ಮಳೆಗಾಲ: ಮುಂಜಾಗ್ರತೆ ಕೈಗೊಳ್ಳಿ
ಮಳೆಗಾಲದ ಸಂದರ್ಭ ಸ್ಥಳಿಯಾಡಳಿತ ಸಂಸ್ಥೆಗಳು ಮತ್ತು ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು.

ಕಳೆದ ವರ್ಷ ಹೆಚ್ಚು ಮಳೆ ಸುರಿದ ಸಂದರ್ಭದಲ್ಲಿ ಉಂಟಾದ ತೊಂದರೆಗಳು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಸಾರ್ವಜನಿಕರು ಕಷ್ಟ ಅನುಭವಿಸಿರುವ ಪ್ರಕರಣಗಳನ್ನು ಗಮನದಲ್ಲಿರಿಸಿಕೊಂಡು, ಅಂತಹ ಪ್ರದೇಶಗಳನ್ನು ಗುರುತಿಸಬೇಕು. ಅಂಥ ಸಮಸ್ಯೆಗಳು ಪುನರಾವರ್ತಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು. 

ಸಾರ್ವಜನಿಕರ ಯಾವುದೇ ತೊಂದರೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು. ಅಧಿಕಾರಿಗಳು ಜಿಲ್ಲಾಧಿಕಾರಿಯ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವುದು ಅಥವಾ ರಜೆ ಮೇಲೆ ತೆರಳುವಂತಿಲ್ಲ ಎಂದು ಅವರು ಹೇಳಿದರು.

ಶಿಕ್ಷಕರಿಗೆ ಸೂಚನೆ: ಮಳೆಗಾಲದಲ್ಲಿ ಶಾಲೆಗಳ ವಿದ್ಯುತ್ ಸಂಪರ್ಕ, ವೈರಿಂಗ್, ಕಟ್ಟಡದ ಸ್ಥಿತಿ-ಗತಿ ಕುರಿತಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಯ ಆವರಣಕ್ಕೆ ಹೊಂದಿಕೊಂಡಂತೆ ವಿದ್ಯುತ್ ಪರಿವರ್ತಕಗಳಿದ್ದಲ್ಲಿ, ಅದನ್ನು ಸ್ಥಳಾಂತರಿಸಬೇಕು. ಶಾಲೆಗಳಲ್ಲಿನ ವಿದ್ಯುತ್ ವೈರಿಂಗ್, ಅರ್ಥಿಂಗ್ ವ್ಯವಸ್ಥೆ ಪರಿಶೀಲಿಸಬೇಕು. ಸುರಕ್ಷತಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಅಂಕಿ ಅಂಶ
₹77.61 ಕೋಟಿ ರೈತರ ಬ್ಯಾಂಕ್ ಖಾತೆಗೆ ಪಾವತಿ

16,018 ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಿಲ್ಲದೆ ಹಣ ಪಡೆಯಲಾಗದ ರೈತರು

* * 

ವಿವಿಧ ಜಿಲ್ಲೆಗಳಿಗೆ ಹೋಲಿಸಿದಲ್ಲಿ, ಕೊಪ್ಪಳ ಜಿಲ್ಲೆಗೆ ಸರ್ಕಾರ ಅತಿ ಹೆಚ್ಚು ಅನುದಾನ ಒದಗಿಸಿದೆ
ಎಂ.ಕನಗವಲ್ಲಿ
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.