ಕುಷ್ಟಗಿ: ಹೊಸದಾಗಿ ಆರಂಭಗೊಳ್ಳಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಜಿಲ್ಲಾ ಆಸ್ಪತ್ರೆಗಳನ್ನು ಸೇರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿರುವ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನ.5ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಈ ವಿಷಯ ಕುರಿತಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿರುವ ಸಂಘ, ಸದರಿ ದಿನದಂದು ಕೊಪ್ಪಳದ ಜಿಲ್ಲಾ ಆಸ್ಪತ್ರೆ ಮುಂದೆ ನಡೆಸುವ ಒಂದು ದಿನದ ಸಾಂಕೇತಿಕ ಮುಷ್ಕರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವೈದ್ಯರು ಮತ್ತು ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿರುಪಾಕ್ಷಪ್ಪ ಹಳ್ಳಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ ಸೇರಿದಂತೆ ಗದಗ, ಹಾವೇರಿ, ಚಿತ್ರದುರ್ಗ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಸಾಧಕ ಬಾಧಕಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮಾಲೋಚಿಸದೆ ಆಯಾ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳನ್ನು ಹೊಸ ವೈದ್ಯಕೀಯ ಕಾಲೇಜುಗಳಿಗೆ ಸೇರಿಸುವ ನಿಟ್ಟಿನಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ನಿಯಮ ಉಲ್ಲಂಘಿಸಿದೆ ಎಂದು ಡಾ.ಹಳ್ಳಳ್ಳಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.