ಕೊಪ್ಪಳ: ಪಡಿತರ ಆಹಾರ ಧಾನ್ಯಗಳ ತೂಕ, ಪ್ರಮಾಣ ಹಾಗೂ ದರದಲ್ಲಿ ವ್ಯತ್ಯಾಸ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ನಾಗರಾಜ್ ಬಿಲ್ಗಾರ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಂದ ನೀಡಲಾಗುವ ಪಡಿತರ ಆಹಾರ ಧಾನ್ಯಗಳ ತೂಕ, ನಿಗದಿತ ಪ್ರಮಾಣ ಹಾಗೂ ದರಗಳಲ್ಲಿ ಬಹಳಷ್ಟು ವ್ಯತ್ಯಾಸ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು, ತಪಾಸಣೆ ನಡೆಸಬೇಕು ಎಂದು ಅವರು ಸೂಚಿಸಿದರು. ನಿಗದಿಗಿಂತ ಕಡಿಮೆ ತೂಕ ನೀಡುವ ಹಾಗೂ ಹೆಚ್ಚಿನ ದರವನ್ನು ಪಡೆಯುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಬಡವರಿಗೆ ಸಮರ್ಪಕವಾಗಿ ಆಹಾರ ಧಾನ್ಯ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ ಅವರಿಗೆ ಸೂಚನೆ ನೀಡಿದರು.
ಸಣ್ಣ ಮತ್ತು ಅತಿ ಸಣ್ಣ ರೈತರ ಅಭ್ಯುದಯಕ್ಕಾಗಿ ಸರ್ಕಾರ ಸುವರ್ಣಭೂಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಎಲ್ಲ ರೈತರಿಗೆ ಅರ್ಜಿ ನಮೂನೆಗಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕರಿಗೆ ಸೂಚನೆ ನೀಡಿದರು.ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳ ಬಗ್ಗೆ ಅಯಾ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಸಾರ್ವಜನಿಕರು ಆ ಯೋಜನೆಗಳ ಸೌಲಭ್ಯ ಪಡೆಯುವಂತೆ ಮಾಡಲು ಹೆಚ್ಚಿನ ಪ್ರಚಾರ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಅವರು ಮಾತನಾಡಿ, ಬೇಸಿಗೆ ಕಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆಯ ಬಗ್ಗೆ ದೂರು ಬರದಂತೆ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಡಾ.ಸೀತಾ ಹಲಗೇರಿ, ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಜಲಾನಯನ ಇಲಾಖೆ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಸಣ್ಣ ನೀರಾವರಿ, ಕಾರ್ಮಿಕ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.