ADVERTISEMENT

ನ್ಯಾಯಸಮ್ಮತ ಚುನಾವಣೆ: ಜಿಲ್ಲಾಧಿಕಾರಿ

ವಿಧಾನಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 5:00 IST
Last Updated 30 ಮಾರ್ಚ್ 2018, 5:00 IST
ಕೊಪ್ಪಳದ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಸಂಬಂಧ ವಿವಿಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಗಾರದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿದರು
ಕೊಪ್ಪಳದ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಸಂಬಂಧ ವಿವಿಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಗಾರದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿದರು   

ಕೊಪ್ಪಳ: 'ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಅಗತ್ಯ ಕ್ರಮ ಕೈಗೊಳ್ಳುಬೇಕು' ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಹೇಳಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಸಂಬಂಧ ವಿವಿಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಗಾರದಲ್ಲಿ ಮಾತನಾಡಿದರು. 'ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಅಧಿಕಾರಿಗಳು ಅಲ್ಲದೆ ಗ್ರಾಮ ಪಂಚಾಯಿತಿಗಳ ಪಿಡಿಒ/ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಚೇರಿ, ಖಾಸಗಿ ಸ್ಥಳಗಳು, ಬಸ್‍ಸ್ಟ್ಯಾಂಡ್, ಬಸ್ ತಂಗುದಾಣಗಳು ಹೀಗೆ ಎಲ್ಲೆಡೆಗಳಲ್ಲಿ ಇರುವ ಜಾಹೀರಾತು ಫಲಕಗಳನ್ನು ತೆಗೆದುಹಾಕಬೇಕು. ಯಾವುದೇ ಇಲಾಖೆಗೆ ಸಂಬಂಧಿಸಿದ್ದರೂ, ಎಲ್ಲ ಜಾಹೀರಾತುಗಳ ಮಾಹಿತಿ, ಸರ್ಕಾರದ ಯೋಜನೆಗಳ ಕುರಿತು ಜಾಹೀರಾತು ಫಲಕಗಳಲ್ಲಿನ ಮಾಹಿತಿ ಕೂಡ ತೆಗೆಸಬೇಕು. ನೀತಿ ಸಂಹಿತೆ ಜಾರಿಯಾದ 24 ಗಂಟೆ ಒಳಗಾಗಿ ಜಿಲ್ಲೆಯಲ್ಲಿ ಎಲ್ಲ ಜಾಹೀರಾತುಗಳು ತೆರವುಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಕ್ರಮ ಜರುಗಿಸಲಾಗುವುದು' ಎಂದು ಹೇಳಿದರು.

'ಜನಪ್ರತಿನಿಧಿಗಳಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ಸಂಬಂಧಪಟ್ಟ ಇಲಾಖೆಗಳು ಹಿಂಪಡೆಯಬೇಕು. ಇಂತಹ ಎಲ್ಲ ವಾಹನಗಳನ್ನು ಜಿಲ್ಲಾಧಿ
ಕಾರಿ ಕಚೇರಿ ಸುಪರ್ದಿಗೆ ವಹಿಸಬೇಕು. ಜಿಲ್ಲೆಯ ಸರ್ಕಾರಿ ಪ್ರವಾಸಿ ಮಂದಿರಗಳಲ್ಲಿ ರಾಜಕೀಯ ಚಟುವಟಿಕೆ ನಿರ್ಬಂಧಿಸಲಾಗಿದೆ. ಯಾವುದೇ ಇಲಾಖೆ
ಗಳು ವೈಯಕ್ತಿಕವಾಗಿ ಫಲಾನುಭವಿಗಳಿಗೆ ನೀಡುವ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ವಿತರಿಸುವಂತಿಲ್ಲ. ಸರ್ಕಾರಿ ಯೋಜನೆಗಳ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದ್ದಲ್ಲಿ, ಮುಂದುವರಿಸಬಹುದು. ಇದುವರೆಗೂ ಭೌತಿಕವಾಗಿ ಆರಂಭವಾಗದೆ ಇರುವ ಕಾಮಗಾರಿಗಳನ್ನು ನೀತಿ ಸಂಹಿತೆ ಅವಧಿಯಲ್ಲಿ ಆರಂಭಿಸುವಂತಿಲ್ಲ' ಎಂದರು.

ADVERTISEMENT

'ಸಂಬಂಧಪಟ್ಟ ಅಧಿಕಾರಿಗಳು, ಜಾರಿಯಲ್ಲಿರುವ ಕಾಮಗಾರಿಗಳ ಸಮಗ್ರ ವಿವರವನ್ನು 48 ಗಂಟೆಗಳ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಅಧಿಕಾರಿಗಳು ತಮಗೆ ವಹಿಸಲಾಗುವ ಕಾರ್ಯವನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಪ್ರಸಕ್ತ ವಿಧಾನಸಭೆ ಚುನಾವಣೆಯನ್ನು ಕಟ್ಟುನಿಟ್ಟಾಗಿ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯಿಂದ ಸಹಕರಿಸಬೇಕು' ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.