ADVERTISEMENT

‘ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಿ’

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಕಾನೂನು ಅರಿವು–ನೆರವು

​ಪ್ರಜಾವಾಣಿ ವಾರ್ತೆ
Published 13 ಜೂನ್ 2018, 11:21 IST
Last Updated 13 ಜೂನ್ 2018, 11:21 IST

ಕೊಪ್ಪಳ: ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಅವಶ್ಯ ಎಂದು ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಂಜೀವ ವಿ.ಕುಲಕರ್ಣಿ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ, ಯೂನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಮಕ್ಕಳ ಸಹಾಯವಾಣಿಯ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರತಿ ವರ್ಷ ಜೂನ್ 12ರಂದು ಆಚರಿಸಲಾಗುತ್ತದೆ. ಮಕ್ಕಳು ಬಾಲಕಾರ್ಮಿಕತೆಗೆ ಒಳಪಡದಂತೆ ತಡೆಯುವುದು ಹಾಗೂ ಅವರನ್ನು ಶಿಕ್ಷಣ ದತ್ತ ಕೊಂಡೊಯ್ಯುವುದು ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶ.

ADVERTISEMENT

ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ 1986ರಲ್ಲಿಯೇ ಕಾಯ್ದೆ ಜಾರಿಯಾದರೂ ಸಹ ಹೋಟೆಲ್ ಇತ್ಯಾದಿ ಕ್ಷೇತ್ರಗಳಲ್ಲಿ ಸಾಮಾನ್ಯವಾಗಿ ಇಂದಿಗೂ ಮಕ್ಕಳು ಕೆಲಸ ಮಾಡುತ್ತಿರುವುದು ಕಂಡುಬರುತ್ತದೆ. ಈ ಕಾಯ್ದೆ ಸಂಪೂರ್ಣವಾಗಿ ಅನುಷ್ಠಾನಗೊಂಡಿಲ್ಲ. ಕಾನೂನು ಅರಿವು ಹಾಗೂ ಶಿಕ್ಷಣದ ಕೊರತೆ ಕಾರಣ ಎಂದರು.

ಯಾವುದೇ ಕ್ಷೇತ್ರಗಳಲ್ಲಿ ಕೆಲಸಕ್ಕಾಗಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳಿಗೆ ಕೆಲಸಕ್ಕೆ ಇಟ್ಟುಕೊಂಡ ಪ್ರಕರಣಗಳು ಹಾಗೂ ಯಾವುದೇ ರೀತಿಯ ದೌರ್ಜನ್ಯ ಕಂಡುಬಂದಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ 1098, ಕಂದಾಯ ಇಲಾಖೆಯ ತಹಶೀಲ್ದಾರ್ ಕಾರ್ಯಾಲಯ, ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಸಮಾಜದ ಶ್ರೇಯೋಭಿವೃದ್ಧಿಗಾಗಿ ಬಾಲಕಾರ್ಮಿಕ ಪದ್ಧತಿಯು ಮಾರಕವಾಗಿದ್ದು, ಈ ಅನಿಷ್ಠ ಪದ್ಧತಿಯನ್ನು ಬೇರಿನಿಂದ ಕಿತ್ತೊಗೆಯಬೇಕು. ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಪ್ರತಿಯೊಬ್ಬ ಭಾರತೀಯರ ಆದ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದರು.

ನಗರದ ತಹಶೀಲ್ದಾರ್‌ ಕಚೇರಿಯಿಂದ ಆರಂಭವಾದ ಜನ ಜಾಗೃತಿ ಜಾಥಾ ಬಸವೇಶ್ವರ ವೃತ್ತದ ಮೂಲಕ ಜಿಲ್ಲಾ ನ್ಯಾಯಾಲಯ ತಲುಪಿತು. ಸಿವಿಲ್ ನ್ಯಾಯಾಧೀಶರಾದ ಗಾಯಿತ್ರಿ ಕಠಾರೆ ಪ್ರತಿಜ್ಞಾವಿಧಿ ಬೋಧಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಎಸ್., ಪ್ರಧಾನ ಸಿವಿಲ್ ನ್ಯಾಯಾಧೀಶ ಹರೀಶ್ ಪಾಟೀಲ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನು ಶರ್ಮಾ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಯುನಿಸೆಫ್ ತರಬೇತಿ ಸಂಯೋಜಕ ಹರೀಶ ಜೋಗಿ, ವಕೀಲರ ಸಂಘದ ಉಪಾಧ್ಯಕ್ಷ ಎಸ್.ಎಚ್. ಇಂಗಳದಾಳ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಕಾರ್ಯದರ್ಶಿ ಕೊಟ್ರೇಶ ಪೋಚಗುಂಡಿ, ಕಾರ್ಮಿಕ ಅಧಿಕಾರಿ ಶ್ಯಾಮರಾವ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಸರೋಜಾ ಬಾಕಳೆ ಇದ್ದರು.

ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡರೆ ಶಿಕ್ಷೆ

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ 2 ವರ್ಷ ಜೈಲು ಹಾಗೂ ₹ 50 ಸಾವಿರ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ ಕಂಪ್ಲಿ ಹೇಳಿದರು.

ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕ ವ್ಯವಸ್ಥೆಗೆ ಒಳಪಟ್ಟ ಮಕ್ಕಳು, ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರುವುದಿಲ್ಲ. ಈ ಪದ್ಧತಿಗೆ ಅನೇಕ ಸಮಸ್ಯೆಗಳಿದ್ದು, ಮುಖ್ಯವಾಗಿ ಶಿಕ್ಷಣದ ಕೊರತೆ. ಹಾಗಾಗಿ ಕಡ್ಡಾಯ ಶಿಕ್ಷಣ ಪ್ರತಿಯೊಬ್ಬ ಮಕ್ಕಳ ಮೊದಲ ಹಕ್ಕು. ಉತ್ತಮ ಶಿಕ್ಷಣ ನೀಡುವುದು ಪಾಲಕರ ಕರ್ತವ್ಯವಾಗಿದೆ ಎಂದರು.

ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕು. ಆಗ ಮಾತ್ರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯ
ಸಂಜೀವ ವಿ. ಕುಲಕರ್ಣಿ, ಜಿಲ್ಲಾ ನ್ಯಾಯಾಧೀಶ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.