ADVERTISEMENT

ಯಲಬುರ್ಗಾ: ಬಿಸಿಯೂಟ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 5:46 IST
Last Updated 14 ಡಿಸೆಂಬರ್ 2013, 5:46 IST

ಯಲಬುರ್ಗಾ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಅಕ್ಷರ ದಾಸೋಹ ನೌಕರರ ಸಂಘದ ಪದಾಧಿಕಾರಿಗಳು ಧರಣಿ ನಡೆಸಿದರು. ಕುಕನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಡುಗೆ ತಯಾರಕ­ರಾಗಿ ಕಾರ್ಯ ನಿರ್ವಹಿಸುತ್ತಿರುವ ಲಲಿತಮ್ಮ ಶರಣಪ್ಪ ಬಣ್ಣದಭಾವಿ ಅವರು ಅಡುಗೆ ಮಾಡುವಾಗ ಸುಟ್ಟುಕೊಂಡಿದ್ದರ ಪರಿಣಾಮ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಅವರಿಗೆ 5 ತಿಂಗಳ ವೇತನ ಸಹಿತ ರಜೆ ಮಂಜೂರು ಹಾಗೂ ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿದರು. ಪಟ್ಟಣದ ವಿವಿಧ ಬೀದಿಗಳಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು ನಂತರ ತಾಲ್ಲೂಕು ಪಂಚಾಯಿತಿಗೆ ತೆರಳಿ ಮನವಿ ಸಲ್ಲಿಸಿ  ಬೇಡಿಕೆಗಳನ್ನು ಕೂಡಲೇ ಈಡೇರಿ­ಸುವಂತೆ ಒತ್ತಾಯಿಸಿದರು.

ತಾಲ್ಲೂಕಿನ ಅನೇಕ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು ಅನಗತ್ಯ ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿದ್ದು ಮೇಲಧಿಕಾರಿಗಳು ಇದರ ವಿರುದ್ದ ಸೂಕ್ತ ಕ್ರಮಕ್ಕೆ ಮುಂದಾ­ಗಬೇಕು. ಬಿಸಿಯೂಟ ತಯಾರಕರಿಗೆ ಪ್ರತಿದಿನ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಿವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಕೆ. ಪದ್ಮಾವತಿ, ಉಪಾಧ್ಯಕ್ಷ ಆದಪ್ಪ ಲಗಳೂರ, ಕಾರ್ಯದರ್ಶಿ ಶಿವನಗೌಡ ಮಾಲಿಪಾಟೀಲ ಸೇರಿದಂತೆ ವಿವಿಧ ಶಾಲೆಯಲ್ಲಿ ಅಡುಗೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆ ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT