ADVERTISEMENT

ವಿವಿಧ ಸಂಘಟನೆಗಳಿಂದ ಪ್ರತಿಭಟನೆ-ಧರಣಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2011, 10:10 IST
Last Updated 27 ಮಾರ್ಚ್ 2011, 10:10 IST
ವಿವಿಧ ಸಂಘಟನೆಗಳಿಂದ ಪ್ರತಿಭಟನೆ-ಧರಣಿ
ವಿವಿಧ ಸಂಘಟನೆಗಳಿಂದ ಪ್ರತಿಭಟನೆ-ಧರಣಿ   

ಕೊಪ್ಪಳ: ಉದ್ಯೋಗ ಖಾತರಿ ಯೋಜನೆಯ ಕೂಲಿ ಹಣ ಪಾವತಿಸುವಂತೆ ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬೀಗ ಹಾಕಲು ಯತ್ನಿಸಿದ ರೈತರ ಮೇಲೆ ಲಾಠಿ ಪ್ರಹಾರ ನಡೆದ ಘಟನೆಯನ್ನು ಖಂಡಿಸಿ ಶನಿವಾರ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ನಗರ ಸಾಕ್ಷಿಯಾಯಿತು.

ಅದರಲ್ಲೂ, ತಹಸೀಲ್ದಾರ್ ಕಚೇರಿ ವೃತ್ತ, ತಹಸೀಲ್ದಾರ್ ಕಚೇರಿ ಹಾಗೂ ಜಿಲ್ಲಾಡಳಿತ ಭವನದ ಮುಂದೆ ಧರಣಿ ನಡೆಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು, ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮವನ್ನು ಖಂಡಿಸಿದರು.

ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪೊಲೀಸರ ದೌರ್ಜನ್ಯವನ್ನು ಖಂಡಿಸಿದರಲ್ಲದೇ, ಲಾಠಿ ಪ್ರಹಾರ ನಡೆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿದರು.

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ಹಸಿರು ಸೇನೆಯ ರಾಜ್ಯ ಸಂಚಾಲಕ ಎಸ್.ಶಶಿಧರ್, ಜಿಲ್ಲಾ ಘಟಕದ ಅಧ್ಯಕ್ಷ ಮದ್ದಾನಯ್ಯ ಹಿರೇಮಠ, ಜಿಲ್ಲಾ ಕಾರ್ಯಾಧ್ಯಕ್ಷ ನಜೀರ್‌ಸಾಬ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗನಗೌಡ ಪೊಲೀಸ್‌ಪಾಟೀಲ ಮತ್ತಿತರ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿ.ವೈ.ಎಫ್.ಐ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ (ಕೆ.ಪಿ.ಆರ್.ಎಸ್.) ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸಹ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ, ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮವನ್ನು ಖಂಡಿಸಿದರು. ಬಿಜೆಪಿ ಸರ್ಕಾರ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸಿದೆ ಎಂದೂ ಅವರು ದೂರಿದರು.

ಕೆ.ಪಿ.ಆರ್.ಎಸ್.ನ ಜಿಲ್ಲಾ ಅಧ್ಯಕ್ಷ ಆರ್.ಕೆ. ದೇಸಾಯಿ, ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ, ಡಿ.ವೈ.ಎಫ್.ಐ. ಮುಖಂಡ ಸುಂಕಪ್ಪ ಗದಗ, ಎಸ್.ಎಫ್.ಐ. ಜಿಲ್ಲಾ ಅಧ್ಯಕ್ಷ ಗುರುರಾಜ ದೇಸಾಯಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರವೇ (ನಾರಾಯಣಗೌಡ ಬಣ): ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸಹ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ತಹಸೀಲ್ದಾರ್ ಕಚೇರಿಗೆ ಸಮೀಪದ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರು, ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ, ರಾಜ್ಯ ರೈತ ಸಂಘ ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಕರವೇ (ಪ್ರವೀಣ ಶೆಟ್ಟಿ ಬಣ): ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ತಾಲ್ಲೂಕು ಘಟಕದ ಅಧ್ಯಕ್ಷ ಆರ್.ವಿಜಯಕುಮಾರ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಲಾಠಿ ಪ್ರಹಾರ ನಡೆಸಿದ ಪೊಲೀಸರ ಕೃತ್ಯವನ್ನು ಖಂಡಿಸಿದ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ನಂತರ ತಮ್ಮ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ.ಆಡ್ನೂರ್ ಅವರಿಗೆ ಸಲ್ಲಿಸಿದರು.

ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜಶೀಲವಂತರ, ಟಿ.ಯು.ಸಿ.ಐ. ರಾಜ್ಯ ಅಧ್ಯಕ್ಷ ಡಿ.ಎಚ್. ಪೂಜಾರ, ಡಾ.ಬಿ.ಆರ್. ಅಂಬೇಡ್ಕರ್ ದಲಿತ ಹೋರಾಟ ಸಮಿತಿಯ ಮುಖಂಡರಾದ ಹುಲುಗಪ್ಪ ಮಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರಪ್ಪ ಭೋವಿ ಸಹ ಘಟನೆಯನ್ನು ಖಂಡಿಸಿ, ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಧರಣಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.