ADVERTISEMENT

ಶಾಶ್ವತ ಯೋಜನೆ ರೂಪಿಸಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 10:10 IST
Last Updated 15 ಮಾರ್ಚ್ 2012, 10:10 IST

ಕೊಪ್ಪಳ: ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುವ ಗ್ರಾಮಗಳನ್ನು ಗುರುತಿಸಿ, ಅಂತಹ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಳನ್ನು ರೂಪಿಸುವಂತೆ ಗುಲ್ಬರ್ಗ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೆ.ರತ್ನಪ್ರಭ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಬರ ಪರಿಸ್ಥಿತಿ ಪರಿಶೀಲನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ  ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ಬಹಳಷ್ಟು ಗ್ರಾಮಗಳು ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಇಂತಹ ಗ್ರಾಮಗಳ ಪ್ರತ್ಯೇಕ ಪಟ್ಟಿಯನ್ನು ತಯಾರಿಸಬೇಕು ಹಾಗೂ ಈ ಗ್ರಾಮಗಳಿಗೆ ನೀರು ಪೂರೈಸಲು ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಾಮರ್ಶೆ ನಡೆಸಿ, ಬರುವ ಹಣಕಾಸು ವರ್ಷದಲ್ಲಿ ಯೋಜನೆಗಳು ಜಾರಿಯಾಗುವ ರೀತಿಯಲ್ಲಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ತಹಸೀಲ್ದಾರರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿ ಸೋಮವಾರ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. 

ಪ್ರತಿ ತಿಂಗಳು ಹೋಬಳಿ ಮಟ್ಟದಲ್ಲಿ ನಡೆಸಲಾಗುವ ಜನಸ್ಪಂದನ ಸಭೆಗಳು ಅರ್ಥಪೂರ್ಣವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದರು.

ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ವಿಸ್ತರಣೆ ಮತ್ತು ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಲಾಗಿದ್ದರೂ ಫಲಿತಾಂಶ ಮಾತ್ರ ತೃಪ್ತಿಕರವಾಗಿಲ್ಲ. ಸಂಪೂರ್ಣ ಸ್ವಚ್ಛತಾ ಆಂದೋಲನ ಯೋಜನೆಯಡಿ ಜಿಲ್ಲೆಗೆ ಸುಮಾರು 6.35 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, 5.26 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಆದರೆ ಶೌಚಾಲಯಗಳ ನಿರ್ಮಾಣ, ಗ್ರಾಮ ನೈರ್ಮಲ್ಯ, ಸ್ವಚ್ಛತೆ ತೃಪ್ತಿಕರವಾಗಿಲ್ಲ ಎಂದರು.

ಯೋಜನೆಯ ಅನುಷ್ಠಾನ ಕುರಿತಂತೆ ಪರಿಶೀಲನೆ ನಡೆಸಿ ಒಂದು ವಾರದ ಒಳಗಾಗಿ ವರದಿಯನ್ನು ಸಲ್ಲಿಸಬೇಕು.  ಜಿಲ್ಲೆಯಲ್ಲಿ ಹಲವಾರು ಸಂಘ- ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ತಮ್ಮ ವಿವಿಧ ಚಟುವಟಿಕೆಗಳಿಗಾಗಿ ಸರ್ಕಾರದಿಂದ ಜಮೀನು ಪಡೆದಿವೆ. ಸಂಸ್ಥೆಗಳು ಯಾವ ಉದ್ದೇಶಕ್ಕಾಗಿ ಎಷ್ಟು ಪ್ರಮಾಣದ ಜಮೀನು ಪಡೆದಿವೆ,  ಅದರ ಸದ್ಬಳಕೆ, ಅಗತ್ಯಕ್ಕಿಂತ ಹೆಚ್ಚು ಜಮೀನು ಪಡದಿರುವ ಪ್ರಕರಣಗಳ ಬಗ್ಗೆ ವರದಿ ಸಲ್ಲಿಸುವಂತೆಯೂ ಅವರು ತಹಸೀಲ್ದಾರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಸಹಾಯಕ ಆಯುಕ್ತ ಕೆ.ಶರಣಬಸಪ್ಪ, ಉಪಕಾರ್ಯದರ್ಶಿ ಅನ್ನದಾನಯ್ಯ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.