ADVERTISEMENT

ಸಿಇಟಿ ಮೂಲಕ ಸೀಟು ಹಂಚಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 11:07 IST
Last Updated 19 ಡಿಸೆಂಬರ್ 2013, 11:07 IST

ಕೊಪ್ಪಳ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕವೇ ವೃತ್ತಿ ಶಿಕ್ಷಣ ಕೋರ್ಸ್‌ಗಳ ಸೀಟುಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ನ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ಸದಸ್ಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಿಂದ ಮುಖ್ಯ ರಸ್ತೆ ಮೂಲಕ ಮೆರವಣಿಗೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕೇಂದ್ರೀಯ ಬಸ್‌ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಮರೇಶ ಕಡಗದ, ‘ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆ ಹೆಸರಿನಲ್ಲಿ ಇಡೀ ವೃತ್ತಿ ಶಿಕ್ಷಣವನ್ನು ಮಾರಾಟದದ ಸರಕನ್ನಾಗಿ ಮಾಡಲು ರಾಜ್ಯ ಸರ್ಕಾರ ಮುಂದಾ­ಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವೃತ್ತಿ ಶಿಕ್ಷಣ ಪಡೆಯಬೇಕು ಎಂಬ ಲಕ್ಷಾಂತರ ಜನ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದ ಈ ನೀತಿಯಿಂದಾಗಿ ಅನ್ಯಾಯವಾಗಲಿದೆ. ಈ ನೀತಿ ಸಾಮಾಜಿಕ, ಶೈಕ್ಷಣಿಕ ಅಸಮಾನತೆಗೆ ದಾರಿ ಮಾಡಿ ಕೊಡಲಿದೆ’ ಎಂದೂ ಟೀಕಿಸಿದರು.

‘ಬಡ ವಿದ್ಯಾರ್ಥಿಗಳಿಗೆ ಕೈಗೆಟುಕು­ವಂತೆ ಶುಲ್ಕ ನಿಗದಿಗೊಳಿಸಬೇಕು, ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಸೀಟುಗಳ ಹಂಚಿಕೆ 75:25ರ ಅನುಪಾತದಲ್ಲಿರಬೇಕು, ಎಲ್ಲಾ ಸರ್ಕಾರಿ ಕಾಲೇಜುಗಳೀಗೆ ಮೂಲ ಸೌಕರ್ಯ ಒದಗಿಸಬೇಕು ಹಾಗೂ ಹೊಸದಾಗಿ ಎಂಜಿನಿಯ­ರಿಂಗ್, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸ­ಬೇಕು ಹಾಗೂ ಖಾಸಗಿ ವೃತ್ತಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇರುವ ಕೇಂದ್ರೀಯ ಶಾಸನವನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯ ಅಜಯಕುಮಾರ, ಶಿವಕುಮಾರ, ವೀರೇಶ, ಫಕೀರಪ್ಪ ನೇತೃತ್ವ  ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.