ADVERTISEMENT

ಸಾಧನಾ ಸಮಾವೇಶ: ಸಮಾವೇಶಕ್ಕೆ ಜಿಲ್ಲೆಯ 18,270 ಫಲಾನುಭವಿಗಳು

​ಪ್ರಜಾವಾಣಿ ವಾರ್ತೆ
Published 14 ಮೇ 2025, 16:08 IST
Last Updated 14 ಮೇ 2025, 16:08 IST
ಕೊಪ್ಪಳದಲ್ಲಿ  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು
ಕೊಪ್ಪಳದಲ್ಲಿ  ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು   

ಕೊಪ್ಪಳ: ‘ರಾಜ್ಯ ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೇ 20ರಂದು ಸಮಾವೇಶ ನಡೆಯಲಿದ್ದು, ಕಂದಾಯ ಗ್ರಾಮಗಳು, ಜಂಪ್ ಸರ್ವೆ, ಪೊಡಿ ಮುಕ್ತ ಗ್ರಾಮಗಳ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳ ವಿತರಣೆ ನಡೆಯಲಿದೆ’ ಎಂದರು.

‘ಈ ಕಾರ್ಯಕ್ರಮಕ್ಕಾಗಿ ಜಿಲ್ಲೆಯ ವಿವಿಧ ತಾಲ್ಲೂಕಿನ ಫಲಾನುಭವಿಗಳನ್ನು ಕರೆದೊಯ್ಯಲು ಸುಸಜ್ಜಿತವಾದ ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳಿಗೆ ಉಪಹಾರ, ಕುಡಿಯುವ ನೀರು ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಅವರ ಮೂಲ ಸ್ಥಾನಗಳಿಗೆ ಸುರಕ್ಷಿತವಾಗಿ ತಲುಪಿಸುವ ಕೆಲಸ ಮಾಡಬೇಕು’ ಎಂದು ನಿರ್ದೇಶನ ನೀಡಿದರು. ಇದಕ್ಕಾಗಿ ನೋಡಲ್‌ ಅಧಿಕಾರಿಗಳನ್ನು ನೇಮಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ ‘ಸಮಾವೇಶಕ್ಕಾಗಿ ಕೊಪ್ಪಳ ಜಿಲ್ಲೆಯಿಂದ 18,270 ಫಲಾನುಭವಿಗಳನ್ನು ಕರೆದೊಯ್ಯುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ 250 ಮತ್ತು ಶಾಲಾ ವಾಹನಳು ಒಳಗೊಂಡಂತೆ 125 ಖಾಸಗಿ ಬಸ್‌ಗಳು ಸೇರಿ ಒಟ್ಟು 375 ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಇಒಗಳು ಪಾಲ್ಗೊಂಡಿದ್ದರು.

ಒಂದು ಲಕ್ಷ ಹಕ್ಕುಪತ್ರ ವಿತರಿಸುವ ಗುರಿ‘

ಅಧಿಕಾರಿಗಳ ಜೊತೆಗಿನ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ ಅವರು ‘ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಸಮರ್ಪಣಾ ಸಮಾವೇಶ ಮಾಡಲಾಗುತ್ತದೆ’ ಎಂದರು. ‘ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮವು ರಾಜ್ಯದಲ್ಲಿ ಇತಿಹಾಸ ನಿರ್ಮಾಣವಾಗುತ್ತದೆ. ಈ ಹಿಂದೆ ಕೇವಲ ಕಂದಾಯ ಗ್ರಾಮಗಳೆಂದು ಘೋಷಣೆಯಾಗಿ ಉಳಿದಿದ್ದ ಗ್ರಾಮಗಳನ್ನು ನಮ್ಮ ಸರ್ಕಾರವು ಪೋಡಿಮುಕ್ತ ಗ್ರಾಮಗಳನ್ನಾಗಿ ಮಾಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದೆ. ಜೊತೆಗೆ ಇ-ಸ್ವತ್ತಿನ ಮೂಲಕ ನೋಂದಣಿ ಮಾಡಿಸಿದೆ. ಸ್ವ ಆಸ್ತಿ ಹಕ್ಕು ಹೊಂದದೆ ಬದುಕುತ್ತಿರುವ ಕುಟುಂಬಗಳಿಗೆ ಹಕ್ಕು ನೀಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ವಿಶೇಷವಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಜಂಪ್ ಸರ್ವೇಯಡಿ 3200 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.