ADVERTISEMENT

1.84 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ

ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 8:34 IST
Last Updated 10 ಮಾರ್ಚ್ 2018, 8:34 IST
1.84 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ
1.84 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ   

ಕೊಪ್ಪಳ: 'ಜಿಲ್ಲೆಯಲ್ಲಿ ಮಾರ್ಚ್ 11ರಿಂದ 14ರ ವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೊ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ 1,83,992 ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ' ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಸ್ಥಾಯಿ ಸಮಿತಿ ಕೊಠಡಿ ಸಭಾಂಗಣದಲ್ಲಿ ಗುರುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಮಕ್ಕಳಿಗೆ ಪೋಲಿಯೊ ಹನಿ ನೀಡುವ ಸಲುವಾಗಿ ಒಟ್ಟು 2,98,889 ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದ 2,49,213 ಮನೆಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ 49,676 ಮನೆಗಳ ಭೇಟಿಗೆ ಗುರಿ ಹೊಂದಲಾಗಿದೆ.

ADVERTISEMENT

ಮಾರ್ಚ್ 11ರಂದು ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಒಟ್ಟು 1,870 ಲಸಿಕಾ ಕೇಂದ್ರ ಸ್ಥಾಪಿಸಲಾಗುವುದು. ಮಾರ್ಚ್ 12ರಿಂದ 14 ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹನಿ ಹಾಕಲಾಗುವುದು'ಎಂದರು.

'ಬಸ್, ರೈಲು ನಿಲ್ದಾಣ, ಸಂತೆ, ಜಾತ್ರೆಗಳಲ್ಲಿ ಅಲ್ಲದೆ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಬೂತ್‍ಗಳನ್ನು ಸ್ಥಾಪಿಸಿ, ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಕಾರ್ಖಾನೆ ಮತ್ತು ಕಟ್ಟಡ ನಿರ್ಮಾಣ, ಇಟ್ಟಿಗೆ ತಯಾರಿಕಾ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುವ ಕಾರ್ಮಿಕರ ಮಕ್ಕಳಿಗೆ, ಕೊಳೆಗೇರಿಗಳು, ಅಲೆಮಾರಿ ಜನರು ತಾತ್ಕಾಲಿಕ ವಾಸ್ತವ್ಯಕ್ಕೆ ಹಾಕಿ ಕೊಂಡಿರುವ ಟೆಂಟ್ ಪ್ರದೇಶಗಳಿಗೂ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಬೇಕು' ಎಂದರು.

'ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು, ಮಕ್ಕಳಿಂದ ಪ್ರಬಾತ ಫೇರಿ, ಜಾಥಾ ಏರ್ಪಡಿಸುವುದು ಹಾಗೂ ಘೋಷಣೆ ಕೂಗುವ ಮೂಲಕ ಹೆಚ್ಚಿನ ಪ್ರಚಾರ ಒದಗಿಸಬೇಕು. ಮಾರ್ಚ್ 11ರಂದು ಸಾರ್ವತ್ರಿಕ ರಜೆ ಇದ್ದರೂ, ಅಂಗನವಾಡಿ ಕೇಂದ್ರಗಳು ಅಂದು ಕಾರ್ಯ ನಿರ್ವಹಿಸಬೇಕು. ಜೆಸ್ಕಾಂನವರು ಲಸಿಕೆಯ ದಾಸ್ತಾನು ಮತ್ತು ವಿತರಣೆಗೆ ಅನುಕೂಲವಾಗುವಂತೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು' ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಅಲಕಾನಂದ ಮಳಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದಾನರಡ್ಡಿ ಇದ್ದರು.

**

ಮಾರ್ಚ್ 11ರಂದು ಸಾರ್ವತ್ರಿಕ ರಜೆ ಇದ್ದರೂ, ಅಂಗನವಾಡಿ ಕೇಂದ್ರಗಳು ಅಂದು ಕಾರ್ಯ ನಿರ್ವಹಿಸಬೇಕು. ಜೆಸ್ಕಾಂ ನವರು ಪೋಲಿಯೊಲಸಿಕೆಯ ದಾಸ್ತಾನು ಮತ್ತು ವಿತರಣೆಗೆ ಅನುಕೂಲವಾಗುವಂತೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು.
-ವೆಂಕಟರಾಜಾ, ಸಿಇಒ, ಜಿಲ್ಲಾ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.