ADVERTISEMENT

ಮೂಲಸೌಕರ್ಯ, ಕೃಷಿ ಅಭಿವೃದ್ಧಿಗೆ ಆದ್ಯತೆ; ಹಾಲಪ್ಪ ಆಚಾರ್

75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೂತನ ಸಚಿವರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 1:14 IST
Last Updated 16 ಆಗಸ್ಟ್ 2021, 1:14 IST
ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಪ್ರಜಾವಾಣಿ ಚಿತ್ರ: ಭರತ್ ಕಂದಕೂರ
ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಪ್ರಜಾವಾಣಿ ಚಿತ್ರ: ಭರತ್ ಕಂದಕೂರ   

ಕೊಪ್ಪಳ: ಜಿಲ್ಲೆಯನ್ನು ಸಮಗ್ರ ನೀರಾವರಿ, ಕೃಷಿ ಸಬಲೀಕರಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದುಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ಹೇಳಿದರು.

75ನೇ ಸ್ವಾತಂತ್ರೋತ್ಸವದ ದಿನಾಚರಣೆ ಅಂಗವಾಗಿ ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ ನಮ್ಮ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಲಿದೆ. ಅದಕ್ಕಾಗಿ ನಮ್ಮ ದೇಶವನ್ನು ಇನ್ನಷ್ಟು ಶಕ್ತಿಯುತವಾಗಿಸಲು ನಾವೆಲ್ಲರೂ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ADVERTISEMENT

‘ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರು, ಇಟಗಿಯ ವೀರಭದ್ರಯ್ಯನವರು ಸೇರಿದಂತೆ ಇನ್ನೂ ಅನೇಕರು ಹೋರಾಡಿದ್ದಾರೆ. ಅವರೆಲ್ಲರ ತ್ಯಾಗ ಬಲಿದಾನಗಳಿಂದ ಇಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಅಂತಹ ಮಹಾನ್ ಹೋರಾಟಗಾರರ ಧೀಮಂತ ಸೇವೆ, ತ್ಯಾಗ ಸ್ಮರಣೀಯವಾದದ್ದು’ ಎಂದರು.

ಜಿಲ್ಲೆಯಲ್ಲಿ ಕೋವಿಡ್-19 ಮೊದಲ ಹಾಗೂ 2ನೇ ಅಲೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಕಠಿಣ ಕ್ರಮಗಳಿಂದ ಹೆಚ್ಚಿನ ತೊಂದರೆಯಾಗದೆ, ಪರಿಸ್ಥಿತಿ ನಿಯಂತ್ರಣದಲ್ಲಿತ್ತು. ಅದರಂತೆ ಸದ್ಯ ಮೂರನೇ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಅದನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 1000 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಘಟಕ ಸ್ಥಾಪಿಸಲಾಗಿದ್ದು, ಯಲಬುರ್ಗಾ, ಕುಷ್ಟಗಿ, ಗಂಗಾವತಿಯಲ್ಲಿ 500 ಎಲ್‌ಪಿಎಂ ಸಾಮರ್ಥ್ಯದ ದ್ರವರೂಪದ ಆಮ್ಲಜನಕ ಘಟಕವನ್ನು ಸ್ಥಾಪಿಸುವ ಕಾಮಗಾರಿ ಪ್ರಗತಿಯಲ್ಲಿದೆಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ಸಂತ್ರಸ್ತ ಮಹಿಳೆಯರು, ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ಉಚಿತ ಆಪ್ತ ಸಮಾಲೋಚನೆ, ಪೊಲೀಸ್ ಹಾಗೂ ಕಾನೂನು ನೆರವು ನೀಡಲು 2019ರ ನವೆಂಬರ್ ಮಾಹೆಯಿಂದ ಸಖಿ ಒನ್ ಸ್ಟಾಫ್ ಸೆಂಟರ್‌ನ್ನು ಜಿಲ್ಲಾ ಆಸ್ಪತ್ರೆಯಲ್ಲಿ ತೆರೆಯಲಾಗಿದೆ. ಇದುವರೆಗೂ 42 ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ 313 ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗೆ ಬಾಲಸೇವಾ ಯೋಜನೆಯಡಿ ಮಾಸಿಕ 3500 ಗಳನ್ನು ನೀಡಲಾಗಿದೆ ಎಂದು ಹೇಳಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್.ಪಾಟೀಲ್,ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್,ಜಿಂ ಸಿಇಒ ಬಿ.ಫೌಜಿಯಾ ತರನ್ನುಮ್, ಪ್ರೊಬೇಷನರಿ ಐಎಎಸ್ ಅಧಿಕಾರಿ ಹೇಮಂತ್ ಎನ್.,ಎಸ್‌ಪಿ ಟಿ.ಶ್ರೀಧರ್,ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿ ಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಹಶೀಲ್ದಾರ್ ಅಮರೇಶ ಬಿರಾದಾರ ಮುಂತಾದವರು ಇದ್ದರು.

ಪಥಸಂಚಲನ, ಸಾಧಕರಿಗೆ ಸನ್ಮಾನ:

75ನೇ ಸ್ವಾತಂತ್ರೋತ್ಸವದ ದಿನಾಚರಣೆ ಅಂಗವಾಗಿ ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ ಸ್ಕೌಟ್ಸ್ಮತ್ತು ಗೈಡ್ಸ್, ಅರಣ್ಯ ಇಲಾಖೆ ಹಾಗೂ ಗೃಹ ರಕ್ಷಕ ದಳದಿಂದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೋವಿಡ್ ವಾರಿಯರ್ಸ್‌ಗಳನ್ನು ಸಚಿವ ಹಾಲಪ್ಪ ಆಚಾರ್ ಸನ್ಮಾನಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ಕನಕಗಿರಿಯ ಅಸ್ರಾ ಮಹೀನ್, ಕಾಟಾಪುರದ ಸುಮಿತ್ರಾ ಗೌಡರ್, ಅಡವಿಬಾವಿಯಗುರುಲಿಂಗಮ್ಮ ಗೊಧಿ, ಹಿರೇನಂದಿಹಾಳದ ನಾಗರತ್ನ ಅಂಗಡಿ ಅವರನ್ನು ಗೌರವಿಸಲಾಯಿತು.

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಿದ ಜಿಲ್ಲಾ ಬೋಧಕ ಆಸ್ಪತ್ರೆ, ಕಿಮ್ಸ್, ಗಂಗಾವತಿಯ ತಾಲ್ಲೂಕು ಆಸ್ಪತ್ರೆ, ಶ್ರೀ ಮಲ್ಲಿಕಾರ್ಜುನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು.

ಸ್ತಬ್ಧಚಿತ್ರಗಳ ಮೆರವಣಿಗೆ:

ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಸ್ವಾವಲಂಬನೆಗೆ ಕೌಶಲಗಳ ಮಹತ್ವ, ಪಶುಪಾಲನಾ ಇಲಾಖೆಯಿಂದ ರಾಷ್ಟ್ರೀಯ ಕೃತಕ ಗರ್ಭಧಾರಣೆ, ಅರಣ್ಯ ಇಲಾಖೆಯಿಂದ ಅರಣ್ಯದ ಮಹತ್ವದ, ಕೃಷಿ ಇಲಾಖೆಯಿಂದ ಬೆಳೆಗಳ ಸಮೀಕ್ಷೆ, ಎರೆಹುಳು ಘಟಕ ನಿರ್ಮಾಣದ ಮಹತ್ವ, ತೋಟಗಾರಿಕೆ ಇಲಾಖೆಯಿಂದ ಒಂದು ಜಿಲ್ಲೆ ಒಂದು ಬೆಳೆ ಯೋಜನೆಯಡಿ ಜಿಲ್ಲೆಯಲ್ಲಿ ಆಯ್ಕೆಯಾದ ಸೀಬೆ (ಪೇರಲ) ಬೆಳೆಯ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಲ್ಯವಿವಾಹ ನಿಷೇಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೋವಿಡ್-19 ಬಗ್ಗೆ ಜಾಗೃತಿ ಹಾಗೂ ಲಸಿಕೆ ಕಾರ್ಯಕ್ರಮ, ನಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸೈನಿಕರ/ಸೇನೆಯ ಬಗ್ಗೆ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಯಿತು.

ಪಥಸಂಚಲನದಲ್ಲಿ ಭಾಗವಹಿಸಿದಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ತಂಡಕ್ಕೆ ಪ್ರಥಮ ಬಹುಮಾನ, ಎಸ್‌ಎಫ್‌ಎಸ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಕ್ಕೆ ದ್ವಿತೀಯ ಬಹುಮಾನ, ಶಿವಶಾಂತವೀರ ಪಬ್ಲಿಕ್ ಶಾಲೆಯ ಸ್ಕೌಟ್ಸ್ ತಂಡಕ್ಕೆ ತೃತೀಯ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.