ಕೊಪ್ಪಳ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ಸೌಲಭ್ಯ ವಿತರಣೆ ಕಾರ್ಯಕ್ರಮ ಅ. 6ರಂದು ಕೊಪ್ಪಳದಲ್ಲಿ ನಡೆಯಲಿದ್ದು, ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲಿದ್ದಾರೆ.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು ‘ಮುಖ್ಯಮಂತ್ರಿ ಕಾರ್ಯಕ್ರಮಕ್ಕಾಗಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮದ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸಹಾಯಧನ, ಹಕ್ಕುಪತ್ರದ ಅಥವಾ ಇತರೆ ಸೌಲಭ್ಯಗಳ ವಿತರಣೆಯಿದ್ದಲ್ಲಿ ಅವುಗಳ ಸಂಪೂರ್ಣ ವಿವರ ಮಾಹಿತಿ ಸಂಬಂಧಿಸಿದ ಸಮಿತಿಗೆ ನೀಡಬೇಕು. ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಾದ ಪುಸ್ತಕ ತಯಾರಿಸಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ತಂಡ ರಚಿಸಲಾಗಿದೆ’ ಎಂದು ಹೇಳಿದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಸ್ವಾಗತ, ವೇದಿಕೆ, ಶಿಷ್ಟಾಚಾರ, ಮೂಲಸೌಕರ್ಯ, ಆಹಾರ, ಆರೋಗ್ಯ, ಸಾರಿಗೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲಾ ಸಮಿತಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮನ್ವಯತೆಯಿಂದ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆಯನ್ನು ಆಯಾ ಇಲಾಖೆ ಅಧಿಕಾರಿಗಳು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪುಷ್ಪಲತಾ ಕವಲೂರು, ಭೂದಾಖಲೆ ಇಲಾಖೆಯ ಉಪನಿರ್ದೇಶಕಿ ಭಾಗ್ಯಮ್ಮ ಬಿ., ಡಿಎಚ್‌ಒ ಡಾ. ಟಿ.ಲಿಂಗರಾಜು ಸೇರಿ ಅನೇಕರು ಪಾಲ್ಗೊಂಡಿದ್ದರು.
Highlights - ವಾಹನಗಳ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚನೆ ಕಾರ್ಯಕ್ರಮಕ್ಕೆ ಬಂದವರು ನೀರು, ಊಟದ ವ್ಯವಸ್ಥೆ ಅವ್ಯವಸ್ಥೆ ಕಂಡುಬಂದರೆ ಅಧಿಕಾರಿಗಳೇ ಹೊಣೆ ಮಾಡುವ ಎಚ್ಚರಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.