ADVERTISEMENT

ಬಾಬಾ ಸಾಹೇಬರ ಆದರ್ಶ ಅಳವಡಿಸಿಕೊಳ್ಳಿ

ಕುಷ್ಟಗಿ: ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಲ್ಲಿ ತಹಶೀಲ್ದಾರ್‌ ಎಂ.ಸಿದ್ದೇಶ್ ಸಲಹೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 10:47 IST
Last Updated 14 ಏಪ್ರಿಲ್ 2021, 10:47 IST
ಕುಷ್ಟಗಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಹೆಸರಿನ ನಾಮಫಲಕಕ್ಕೆ ಸಂಸದ ಸಂಗಣ್ಣ ಕರಡಿ ಮಾಲಾರ್ಪಣೆ ನೆರವೇರಿಸಿದರು
ಕುಷ್ಟಗಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಹೆಸರಿನ ನಾಮಫಲಕಕ್ಕೆ ಸಂಸದ ಸಂಗಣ್ಣ ಕರಡಿ ಮಾಲಾರ್ಪಣೆ ನೆರವೇರಿಸಿದರು   

ಕುಷ್ಟಗಿ: ‘ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನ ಆಚರಿಸುವುದರ ಜತೆಗೆ ಅವರು ಬೋಧಿಸಿದ ತತ್ವ, ಸಿದ್ಧಾಂತ ಮತ್ತು ಅವರ ಜೀವನದ ಆದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು’ ಎಂದು ತಹಶೀಲ್ದಾರ್ ಎಂ.ಸಿದ್ದೇಶ್‌ ಹೇಳಿದರು.

ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಂಬೇಡ್ಕರ್‌ ಅವರು ಶೋಷಿತ ಸಮುದಾಯದಲ್ಲಿ ಜನಿಸಿ ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿದರು. ಉತ್ತಮ ಶಿಕ್ಷಣ ಪಡೆದರು. ದೇಶಕ್ಕೆ ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡುವ ಸಾಮಾಜಿಕ ಸಮಾನತೆಯ ಪರಿಕಲ್ಪನೆಯನ್ನು ಒಳಗೊಂಡ ಸಂವಿಧಾನ ನೀಡಿದರು. ಅದು ಪ್ರಪಂಚಕ್ಕೆ ಮಾದರಿಯಾಗಿದೆ’ ಎಂದು ಹೇಳಿದರು.

ADVERTISEMENT

ಪುರಸಭೆ ಸದಸ್ಯ ವಸಂತ ಮೇಲಿನಮನಿ, ಗ್ರೇಡ್ –2 ತಹಶೀಲ್ದಾರ್‌ ಮುರಳೀಧರ, ಶಿರಸ್ತೆದಾರರಾದ ಸತೀಶ, ರಜನಿಕಾಂತ ಕೆಂಗಾರಿ ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಹೆದ್ದಾರಿ ಬಳಿ ನಡೆದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ನಾಮಫಲಕಕ್ಕೆ ಲೋಕಸಭಾ ಸದಸ್ಯ ಸಂಗಣ್ಣ ಕರಡಿ ಮಾಲಾರ್ಪಣೆ ನೆರವೇರಿಸಿದರು. ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಮತ್ತು ಸಾರ್ವಜನಿಕರು, ದಲಿತ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.

ಪುರಸಭೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಜಿ.ಕೆ.ಹಿರೇಮಠ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಇತರ ಸದಸ್ಯರು, ಮುಖ್ಯಾಧಿಕಾರಿ ಉಮೇಶ ಹಿರೇಮಠ ಹಾಗೂ ಸಿಬ್ಬಂದಿ ಇದ್ದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿಯೂ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಾಚಾರ್ಯ ಬಸವರಾಜ ಕಂಬಳಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೆಳೆದುಬಂದ ದಾರಿ, ಜೀವನ ಆದರ್ಶಗಳು ಹಾಗೂ ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿವರಿಸಿದರು.

ಸಹಾಯಕ ಪ್ರಾಧ್ಯಾಪಕ ರವಿ ಹಾದಿಮನಿ, ಚನ್ನನಗೌಡ ಪಾಟೀಲ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.