
ಸಣ್ಣ ಕನಕಪ್ಪ ಚಲವಾದಿ
ಕನಕಗಿರಿ: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಿಜೆಪಿಗೆ ಬಹುಮತ ಅಗತ್ಯ ಇದೆ ಎಂದು ಸಂಸದ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಯನ್ನು ಬಿಜೆಪಿ ಎಸ್ಸಿ ಮೋರ್ಚಾ ನಿಕಟಪೂರ್ವ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ ಚಲವಾದಿ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು,‘ಹೆಗಡೆ ಅವರ ಸಂವಿಧಾನದ ಬಗೆಗಿನ ಹೇಳಿಕೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಂವಿಧಾನದ ಆಶಯದಂತೆ ನಡೆದುಕೊಳ್ಳುವ ಪಕ್ಷ ಎಂದರೆ ಅದು ಬಿಜೆಪಿ. ಸಂವಿಧಾನದಲ್ಲಿ ಹೇಳಿದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಹಲವಾರು ಯೋಜನೆ ಜಾರಿಗೊಳಿಸುವ ಮೂಲಕ ಸಾಬೀತುಪಡಿಸಿದೆ’ ಎಂದು ತಿಳಿಸಿದ್ದಾರೆ.
ಸಂವಿಧಾನದ ಸಾರ್ವಭೌಮತ್ವ ಎತ್ತಿ ಹಿಡಿಯುವ ಅಚಲವಾದ ಬದ್ಧತೆಯನ್ನು ಬಿಜೆಪಿ ಹೊಂದಿದೆ ಎಂದಿರುವ ಅವರು,‘ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಪಾಲಿಸಿಕೊಂಡು ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಎರಡನೇ ಬಾರಿಗೆ ಮೋದಿ ಅವರು ಸಂವಿಧಾನಕ್ಕೆ ನಮಸ್ಕರಿಸಿ ಕಾರ್ಯಾರಂಭಿಸಿದ್ದಾರೆ. ಇದು ಅವರು ಸಂವಿಧಾನಕ್ಕೆ ನೀಡುವ ಗೌರವ’ ಎಂದಿದ್ದಾರೆ.
ಸಂಸದ ಅನಂತಕುಮಾರ ಹೆಗಡೆ ಏನೇನೋ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಂದಿದ್ದಾರೆ. ಇದು ಅತ್ಯಂತ ಖಂಡನೀಯ. ಇದು ಅವರ ವೈಯಕ್ತಿಕ ಹೇಳಿಕೆಯಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಈ ರೀತಿ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.