ಕೊಪ್ಪಳ: ‘ಶಿಕ್ಷಕರು ಶಾಲೆಯಲ್ಲಿ ಸಿ ಮತ್ತು ಡಿ ವಿಭಾಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಮೇಲೆ ಹೆಚ್ಚು ಗಮನ ಹರಿಸಬೇಕು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ 38 ಜನ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ 15 ದಿನಗಳಿಗೊಮ್ಮೆ ಪಾಲಕರ ಸಭೆ ನಡೆಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆಯ ಮುಖ್ಯಶಿಕ್ಷಕರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಚರ್ಚಿಸಲು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,‘ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಕಲಿಕಾಂಶಗಳನ್ನು ಸರಳೀಕರಣಗೊಳಿಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ಮಾಡಬೇಕು. ಪ್ರತಿಯೊಬ್ಬ ನೋಡಲ್ ಅಧಿಕಾರಿಗೆ 6 ಶಾಲೆಗಳನ್ನು ದತ್ತು ನೀಡಲಾಗಿದೆ. ಸರ್ಕಾರದ ಅಧೀನದಲ್ಲಿ ಜಿಲ್ಲೆಯಲ್ಲಿ 208 ಶಾಲೆಗಳಿವೆ. ದತ್ತು ಪಡೆದ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗೆ ಭೇಟಿ ನೀಡಿ ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ನಿಗಾವಹಿಸಬೇಕು’ ಎಂದರು.
‘ನೋಡಲ್ ಅಧಿಕಾರಿಗಳು ವಾರದಲ್ಲಿ ಒಂದು ಅಥವಾ ಎರಡು ದಿನ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಫಲಿತಾಂಶ ಸುಧಾರಣೆಗೆ ಒತ್ತು ನೀಡಬೇಕು. ಶಿಕ್ಷಕರು ಪ್ರತಿ ದಿನ ಮಕ್ಕಳು ಶಾಲೆಗೆ ಬಂದ ತಕ್ಷಣ ದಿನಕ್ಕೊಂದು ಲೆಕ್ಕ ದಿನಕ್ಕೊಂದು ಪ್ರಶ್ನೆ ನೀಡಬೇಕು. ಗ್ರೂಪ್ ಮಾಡಿ ಜಾಣ ಮಕ್ಕಳ ಜೊತೆ ಸಮೀಕರಣಗೊಳಿಸಿ ಮಕ್ಕಳಿಗೆ ಕಲಿಸಬೇಕು’ ಎಂದು ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.