
ಆದೇಶ
ಕನಕಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಸಹಯೋಗದಲ್ಲಿ ಬುಧವಾರ ಆಶಾ ಕಾರ್ಯಕರ್ತೆಯರಿಗೆ ‘ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ’ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಲೀಗಲ್ ಕಂ ಪ್ರೊಬೇಷನ್ ಆಫೀಸರ್ ಶಿವಲೀಲಾ ವನ್ನೂರು ಮಾತನಾಡಿ, ‘ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರ್ಕಾರ ವಿವಿಧ ಕಾನೂನುಗಳನ್ನು ಜಾರಿಗೆ ತಂದಿದೆ’ ಎಂದು ತಿಳಿಸಿದರು.
ಅಂತರ್ಜಾಲ, ಸಾಮಾಜಿಕ ಜಾಲತಾಣದ ಪ್ರಭಾವದಿಂದ ಪ್ರೀತಿ, ಪ್ರೇಮಕ್ಕೆ ಬಲಿಯಾಗುತ್ತಿದ್ದಾರೆ. ಅಪ್ರಾಪ್ತ ಮಕ್ಕಳಿಗೆ ಮದುವೆ ಮಾಡಿದವರು, ಭಾಗಿಯಾದವರು, ಪ್ರೋತ್ಸಾಹ ನೀಡಿದವರು ಬಾಲ್ಯವಿವಾಹ ನಿಷೇಧ ಕಾನೂನು ವ್ಯಾಪ್ತಿಗೆ ಬರುತ್ತಿದ್ದು ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಇಂಥ ಮದುವೆಗಳಿಂದ ದೂರ ಇರುವುದು ಉತ್ತಮ ಎಂದರು.
ಗ್ರಾಮ ಮಟ್ಟದಲ್ಲಿ ವಿವಿಧ ರೀತಿಯಲ್ಲಿ ಜಾಗೃತಿಯನ್ನು ಮೂಡಿಸಲು ಗ್ರಾಮ ಮಟ್ಟದ ‘ಮಕ್ಕಳ ರಕ್ಷಣಾ ಸಮಿತಿ’ ಸದಸ್ಯ ಕಾರ್ಯದರ್ಶಿಗಳಾದ ಆಶಾ ಕಾರ್ಯಕರ್ತೆಯರು ಮಕ್ಕಳ ಹಕ್ಕುಗಳು, ಕಾನೂನುಗಳ ಮತ್ತು ಮಕ್ಕಳ ಸುರಕ್ಷತೆ ಕುರಿತು ಅರಿವು ಹೊಂದಿರಬೇಕು. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಾಂಸ್ಥಿಕ) ಪ್ರಶಾಂತರೆಡ್ಡಿ ಮಾತನಾಡಿ, ‘ಮಗು ಬೇಡವಾದರೆ ಅದನ್ನು ಎಲ್ಲೆಂದರಲ್ಲಿ ಬಿಸಾಡಿದೆ 1098 ಹಾಗೂ ನೇರವಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ನೀಡಬೇಕು’ ಎಂದು ತಿಳಿಸಿದರು.
ಪ್ರತಿಭಾ ಕಾಶಿಮಠ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ರವಿಕುಮಾರ ಪವಾರ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.