
ಕೊಪ್ಪಳ: ‘ಸಮುದಾಯಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂಬಂಧಿತ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬುಧವಾರ ಜಿಲ್ಲೆಯ ಅಂಗವಿಕಲರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಮತ್ತು ರಕ್ಷಣೆ ಕುರಿತು ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ರಾಜ್ಯ ಸರ್ಕಾರವು ಅಂಗವಿಕಲ ಮಕ್ಕಳ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸರ್ಕಾರಗಳ ಒಟ್ಟು ಅನುದಾನದಲ್ಲಿ ಶೇ 5ರಷ್ಟು ಅನುದಾನ ಮೀಸಲಿಟ್ಟು ಕಾರ್ಯಕ್ರಮಗಳನ್ನು ರೂಪಿಸಿ ಅವಕಾಶಗಳನ್ನು ನೀಡಿದೆ. ಆದ್ದರಿಂದ ಸಮುದಾಯಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸಂಬಂಧಿತ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.
‘ಒಂದು ವೇಳೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರವಾಣಿ ಸಂಖ್ಯೆ: 080-22115290 /92 ಅಥವಾ www.kscpcr.karnataka.gov. in ಮೂಲಕ ದೂರು ನೀಡಬಹುದು’ ಎಂದು ತಿಳಿಸಿದರು.
ಡಿವೈಎಸ್‌ಪಿ ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮುತ್ತಣ್ಣ ಸರವಗೋಳ ಮಾತನಾಡಿ,‘ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರನ್ವಯ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಮಾಹಿತಿಯನ್ನು ಬಹಿರಂಗಪಡಿಸುವುದಕ್ಕೆ ಅವಕಾಶವಿಲ್ಲ’ ಎಂದರು.
ಡಿಡಿಪಿಯು ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೆಶಕ ಪರಶುರಾಮ ವೈ.ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ, ಕೊಪ್ಪಳ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ವ್ಯವಸ್ಥಾಪಕ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.