ADVERTISEMENT

ಪ್ರತಿ ಗ್ರಾ.ಪಂ.ನಲ್ಲಿ ಶಿಶುಪಾಲನಾ ಕೇಂದ್ರ: ಇಒ ದುಂಡಪ್ಪ ತುರಾದಿ

ಮಕ್ಕಳ ಆರೈಕೆದಾರರ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 16:47 IST
Last Updated 7 ಆಗಸ್ಟ್ 2023, 16:47 IST
ಕೊಪ್ಪಳದಲ್ಲಿ ಸೋಮವಾರ ನಡೆದ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಾಗಾರವನ್ನು ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಉದ್ಘಾಟಿಸಿದರು
ಕೊಪ್ಪಳದಲ್ಲಿ ಸೋಮವಾರ ನಡೆದ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಾಗಾರವನ್ನು ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಉದ್ಘಾಟಿಸಿದರು   

ಕೊಪ್ಪಳ: ‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಆದಷ್ಟು ಬೇಗನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಮಕ್ಕಳ ಆರೈಕೆದಾರರ ತರಬೇತಿ ಪಡೆದು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮೀಣ ಶಿಶುಪಾಲನಾ ಕೇಂದ್ರಗಳ ಮಕ್ಕಳ ಆರೈಕೆದಾರರಿಗೆ ಏರ್ಪಡಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಆ. 15ರಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರಗಳನ್ನು ಆರಂಭಿಸಲಾಗುವುದು’ ಎಂದರು.

‘ಮಕ್ಕಳ ಆರೈಕೆದಾರರಿಗೆ ಅವರ ಜಾಬ್‌ಕಾರ್ಡ್‌ ಮೂಲಕ ಗೌರವಧನ ಪಾವತಿಸಲಾಗುತ್ತದೆ. ತರಬೇತಿ ಅವಧಿಯಲ್ಲಿ ಮಾಸ್ಟರ್‌ ಟ್ರೈನರ್‌ಗಳು ಮಾರ್ಗದರ್ಶನ ಮಾಡಲಿದ್ದಾರೆ. ಆರೈಕೆದಾರರು ಅಗತ್ಯವಾದ ದಾಖಲಾತಿ ನಿರ್ವಹಿಸುವ ಉದ್ದೇಶದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಕಾಲಕಾಲಕ್ಕೆ ಮೇಲಧಿಕಾರಿಗಳು ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಲಿದ್ದು ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿರು.

ADVERTISEMENT

ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ ಕೆ. ಮಾತನಾಡಿ ‘ಎಲ್ಲರೂ ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಆರೈಕೆದಾರರು ವೈಯಕ್ತಿಕ ಗಮನಹರಿಸಿ ಮಕ್ಕಳನ್ನು ಆರೈಕೆ ಮಾಡಬೇಕು’ ಎಂದರು.

ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತರಬೇತಿಯ ಮಾಸ್ಟರ್ ಟ್ರೈನರ್‌ಗಳಾದ ಜಯಶ್ರೀ, ಹಿರಿಯ ಮೇಲ್ವಿಚಾರಕಿ ಭುವನೇಶ್ವರಿ, ಗಂಗಾಧರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.