ADVERTISEMENT

ಮಗುವಿನ ಘನತೆ ಎತ್ತಿ ಹಿಡಿಯುವುದು ಕರ್ತವ್ಯ: ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಮಕ್ಕಳ ರಕ್ಷಣಾ ನೀತಿ ತರಬೇತಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 6:33 IST
Last Updated 7 ಸೆಪ್ಟೆಂಬರ್ 2025, 6:33 IST
ಕೊಪ್ಪಳದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯಗಾರ ನಡೆಯಿತು
ಕೊಪ್ಪಳದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಕಾರ್ಯಗಾರ ನಡೆಯಿತು   

ಕೊಪ್ಪಳ: ‘ಪ್ರತಿ ಮಗುವಿನ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಅನುಕೂಲಕರವಾಗುವ ವಾತಾವರಣ ನಿರ್ಮಿಸಿ, ಮಗುವಿನ ಘನತೆ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುನಿಸೆಫ್-ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಸತಿ ನಿಲಯಗಳ ನಿಲಯ ಪಾಲಕರಿಗೆ, ಪ್ಯಾರಾ ಮೆಡಿಕಲ್ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಸ್ಥರಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ಮಕ್ಕಳ ರಕ್ಷಣಾ ನೀತಿಗಳ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿನ ಪ್ರತಿ ಮಗುವು ಸುರಕ್ಷಿತ, ರಕ್ಷಣಾತ್ಮಕ ಮತ್ತು ಸಶಕ್ತ ಪರಿಸರದಲ್ಲಿ ಬೆಳೆಯುವುದರೊಂದಿಗೆ, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಮಗುವು ತನ್ನ ಸಾಮರ್ಥ್ಯವನ್ನು ತಲುಪಲು ಅವಕಾಶಗಳನ್ನು ಒದಗಿಸಬೇಕು. ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸಲು ಮತ್ತು ಆನಂದಿಸಲು ಪೋಷಕರು, ಆರೈಕೆ ಸೇವೆಗಳನ್ನು ನೀಡುವವರು ಮತ್ತು ಸಮುದಾಯ ಒಟ್ಟುಗೂಡಿ ಕೆಲಸ ಮಾಡುವುದರೊಂದಿಗೆ ಮಕ್ಕಳ ಕುರಿತಾದ ತಾರತಮ್ಯಗಳನ್ನು ನಿವಾರಿಸುವ ಹಾಗೂ ಮಕ್ಕಳ ಭಾಗವಹಿಸುವಿಕೆ, ಸಂಭಾಷಣೆ ಮತ್ತು ಅಭಿಪ್ರಾಯಗಳನ್ನು ಗೌರವಿಸುವುದರೊಂದಿಗೆ ಮಗುವಿನ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ’ ಎಂದು ಹೇಳಿದರು.

ADVERTISEMENT

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಮಕ್ಕಳ ಅಧಿಪತ್ಯದ ತತ್ವವನ್ನಾಧರಿಸಿದ ಮಕ್ಕಳ ರಕ್ಷಣೆಯ ಒಂದು ಸಮಗ್ರ ಭಾಗವಾಗಿದೆ. ಆದ್ದರಿಂದ ನಿಮ್ಮ ವಸತಿ ನಿಲಯ, ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮಕ್ಕಳ ಮೇಲಾಗುವ ವಿವಿಧ ರೀತಿಯ ಅಪರಾಧಗಳನ್ನು ತಡೆಗಟ್ಟಿ ಸುರಕ್ಷಿತ ವಾತಾವರಣವನ್ನು ನಿರ್ಮಿಸಬೇಕು ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಮಾತನಾಡಿ, ಜಿಲ್ಲೆಯ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ, ದೌರ್ಜನ್ಯ ಎಸಗಿದ ಪ್ರಕರಣಗಳು ಮತ್ತು ವಸತಿ ನಿಲಯದಿಂದ ತೆರಳಿದ ಸಂದರ್ಭದಲ್ಲಿ ಮೃತಪಟ್ಟ ಪ್ರಕರಣಗಳು ವರದಿಯಾಗಿವೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಉನ್ನತಿಗಾಗಿ ವಸತಿ ನಿಲಯ, ವಸತಿ ಶಾಲೆಗಳನ್ನು ಆರಂಭಿಸಿದ್ದು, ಇಂತಹ ಸಂಸ್ಥೆಗಳಲ್ಲಿ ವಾಸಿಸುವ ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ವಸತಿ ನಿಲಯದ ಮಕ್ಕಳ ಮೇಲಿನ ಯಾವುದೇ ರೀತಿಯ ಅಪರಾಧ ಹಾಗೂ ಮಕ್ಕಳ ನಿರ್ಲಕ್ಷತನ ಸಲ್ಲದು ಎಂದರು.

ಯುನಿಸೆಫ್-ಮಕ್ಕಳ ರಕ್ಷಣಾಯೋಜನೆ ವಿಭಾಗೀಯ ಸಂಯೋಜಕ ಡಾ. ಕೆ.ರಾಘವೇಂದ್ರ ಭಟ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕ ಹರೀಶ್ ಜೋಗಿ, ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪ್ರಕಾಶ ಕಡಗದ, ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಜಗದೀಶ ಎಚ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.