ADVERTISEMENT

ಅಧಿಕಾರಿಗಳ ಹೆಗಲಿಗೆ ಜನರನ್ನು ಕರೆತರುವ ಹೊಣೆ

ಜಿಲ್ಲಾಕೇಂದ್ರಕ್ಕೆ ಅ. 6ರಂದು ಸಿಎಂ ಸಿದ್ದರಾಮಯ್ಯ, ವಿವಿಧ ಕಾಮಗಾರಿಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 3:18 IST
Last Updated 30 ಸೆಪ್ಟೆಂಬರ್ 2025, 3:18 IST
ಕೊಪ್ಪಳದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು
ಕೊಪ್ಪಳದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು   

ಕೊಪ್ಪಳ: ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6ರಂದು ಜಿಲ್ಲಾಕೇಂದ್ರಕ್ಕೆ ಬರಲಿದ್ದು, ಜನ ಮತ್ತು ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ಕರೆ ತರುವ ಹೊಣೆಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ.

ಈ ಕುರಿತು ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ‘ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಎರಡೂವರೆ ವರ್ಷಗಳ ಅವಧಿಯಲ್ಲಿ  ಕಾರ್ಯಕ್ರಮಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಸಮಿತಿಗಳನ್ನು ರಚಿಸಿ ನಿಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪ್ರಸ್ತುತ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹಾನಿಯಾದ ಬೆಳೆಗಳಿಗೆ ತಕ್ಷಣ ಪರಿಹಾರ ನೀಡಲು ಆಯಾ ತಾಲ್ಲೂಕುಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಜಿಲ್ಲೆಯಲ್ಲಿ ಅ. 5ರ ಒಳಗೆ ಮುಗಿಸಬೇಕು’ ಎಂದು ಸೂಚಿಸಿದರು. 

ADVERTISEMENT

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಶಾಸಕ ಬಸವರಾಜ ರಾಯರಡ್ಡಿ ಅವರು ಮಾತನಾಡಿ ‘ಸರ್ಕಾರದ ಕಾರ್ಯಕ್ರಮ ಆಗಿರುವುದರಿಂದ ಸಾರಿಗೆ, ಪೆಂಡಾಲ್, ಆಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಗ್ರಾಮವಾರು ಕಮಿಟಿ ಮಾಡಬೇಕು’ ಎಂದು ನಿರ್ದೇಶನ ನೀಡಬೇಕು.

ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಮಾತನಾಡಿ ‘₹2.5 ಸಾವಿರ ಕೋಟಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿವೆ. ಪ್ರತಿ ತಾಲ್ಲೂಕುವಾರು ತಹಶೀಲ್ದಾರ್‌ ಹಾಗೂ ಇಒಗಳ ಸಮಿತಿ ಮಾಡಲಾಗಿದ್ದು, ಪ್ರತಿ ಭೂತ್‌ಗೂ ಒಂದು ಬಸ್ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸರ್ಕಾರಿ ಅಧಿಕಾರಿಗಳಿಗೆ ಇಲ್ಲ ರಜೆ

ಮುಖ್ಯಮಂತ್ರಿಯವರ ಕಾರ್ಯಕ್ರಮ ಮುಗಿಯುವ ತನಕ ರಜೆ ಮೇಲೆ ಯಾರೂ ಹೋಗಬಾರದು ಎಂದು ಸಚಿವರು ಸೂಚನೆ ನೀಡಿದರು.  ಕಾರ್ಯಕ್ರಮಕ್ಕೆ ಜನರನ್ನು ಕರೆ ತರಲು 1500 ಸರ್ಕಾರಿ 100 ಖಾಸಗಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. 83655 ಫಲಾನುಭವಿಗಳ ಪಟ್ಟಿ ಮಾಡಲಾಗಿದೆ. ಊಟದ ಟೆಂಡರ್ ಕರೆಯಲಾಗಿದ್ದು 100 ಊಟದ ಕೌಂಟರ್‌ ಇರಲಿವೆ. ವೇದಿಕೆ ಪಕ್ಕದಲ್ಲಿ ವಿವಿಧ ಇಲಾಖೆಯ ಮಳಿಗೆಗಳನ್ನು ಹಾಕಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.