ADVERTISEMENT

ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ: ಮಾಜಿ ಸಚಿವ ಬಿ. ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:35 IST
Last Updated 1 ಆಗಸ್ಟ್ 2024, 15:35 IST
ಬಿ. ಶ್ರೀರಾಮುಲು 
ಬಿ. ಶ್ರೀರಾಮುಲು    

ಕಾರಟಗಿ: ‘ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಸಿಲುಕಿದೆ. ಮುಡಾ ಹಗರಣ ಈಗಾಗಲೇ ರಾಜ್ಯಪಾಲರ ಅಂಗಳದಲ್ಲಿದ್ದು ಅವರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುವರು. ಈ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಅಧಿಕವಾಗಿದ್ದು, ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.

ತಾಲ್ಲೂಕಿನ ನದಿಪಾತ್ರದ ಗ್ರಾಮಗಳಲ್ಲಿಯ ನೆರೆ ಹಾನಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡುವ ಮುನ್ನ ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸರ್ಕಾರಕ್ಕೆ ಎಚ್ಚರ ನೀಡಲು ಆ 3ರಂದು ಬೆಂಗಳೂರಿನಿಂದ ಮೈಸೂರವರೆಗೆ ನಮ್ಮ ಪಕ್ಷ ಪಾದಯಾತ್ರೆ ಹಮ್ಮಿಕೊಂಡಿದೆ’ ಎಂದ ಅವರು ಮುಡಾ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ‘ಉಪ್ಪು ತಿಂದ ಮೇಲೆ ನೀರು ಕುಡಿಯಬೇಕಲ್ಲವೇ? ಪ್ರಕರಣದ ಬಗ್ಗೆ ಮಾತನಾಡುವಷ್ಟರ ಮಟ್ಟಿಗೆ ದೊಡ್ಡವನು ನಾನಲ್ಲ’ ಎಂದರು.

ADVERTISEMENT

‘ಮುಡಾ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡುತ್ತದೆ, ಕಾನೂನಿಗೆ ಎಲ್ಲರೂ ತಲೆಬಾಗಲೇಬೇಕು. ಬಿಜೆಪಿ ಪಾದಯಾತ್ರೆಯಲ್ಲಿ ಸ್ನೇಹಿತ ಜಿ. ಜನಾರ್ದನರೆಡ್ಡಿ, ಶಾಸಕ ದೊಡ್ಡನಗೌಡ ಸೇರಿದಂತೆ ಎಲ್ಲಾ ನಾಯಕರು ಪಾಲ್ಗೊಳ್ಳುತ್ತೇವೆ’ ಎಂದ ಅವರು, ಬಿಜೆಪಿ ಅಪ್ಪ ಮಕ್ಕಳ ಪಕ್ಷ ಎಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ‘ವೈಯಕ್ತಿಕ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷ, ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಕೆಲಸ ಮಾಡುತ್ತೇವೆ. ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜಕೀಯವಾಗಿ ಓಡಿಹೋಗುವ ಸ್ಥಿತಿ ನನಗಿಲ್ಲ. ಪಕ್ಷ ಅವಕಾಶ ನೀಡಿದವರ ಗೆಲುವಿಗೆ ಶ್ರಮಿಸುವೆ’ ಎಂದರು.

ಶಾಸಕರಾದ ಜಿ. ಜನಾರ್ದನರೆಡ್ಡಿ, ದೊಡ್ಡನಗೌಡ ಪಾಟೀಲ್, ಮಾಜಿ ಶಾಸಕ ಬಸವರಾಜ ದಢೇಸುಗೂರು, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್, ಮುಖಂಡರಾದ ಶರಣಪ್ಪ ಭಾವಿ, ಬಸವರಾಜ ಕ್ಯಾವಟರ್, ರಮೇಶ್ ನಾಯಕ, ವೆಂಕಟೇಶ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.