ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 14:44 IST
Last Updated 17 ಜೂನ್ 2022, 14:44 IST
ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿದ ಇಡಿ ಕ್ರಮ ಖಂಡಿಸಿ ಕೊಪ್ಪಳದಲ್ಲಿ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು
ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿದ ಇಡಿ ಕ್ರಮ ಖಂಡಿಸಿ ಕೊಪ್ಪಳದಲ್ಲಿ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಯಿತು   

ಕೊಪ್ಪಳ: ರಾಹುಲ್‌ ಗಾಂಧಿ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ (ಇ.ಡಿ) ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಾಯಕರ ಮೇಲೆ ನಡೆಯುತ್ತಿರುವ ಎಲ್ಲಾ ಇಡಿ ಪ್ರಕ್ರಿಯೆಗಳನ್ನು ಕೈಬಿಡಬೇಕು. ಈ ವಿಷಯಗಳ ಮೇಲೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರನ್ನು ತಡೆಯಬಾರದು ಎಂದು ಆಗ್ರಹಿಸಿದರು.

ಇಲ್ಲಿನ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ನಾಯಕರು ಇಡಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಷ್ಟ್ರಪತಿಗೆ ಬರೆದ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಮಾರುತಿ ಅವರಿಗೆ ಸಲ್ಲಿಸಿದರು.

ADVERTISEMENT

ನ್ಯಾಷನಲ್ ಹೆರಾಲ್ಡ್ ಮತ್ತು ಅದರ ಇತರ ಆವೃತ್ತಿಗಳು ಸ್ವಾತಂತ್ರ್ಯ ಹೋರಾಟ ಮತ್ತು ಕಾಂಗ್ರೆಸ್ ಚಳವಳಿಯ ಮುಖವಾಣಿಯಾಗಿದ್ದವು. ಆದರೆ, ಇದೇ ಪತ್ರಿಕೆಯ ಹೆಸರಿನಲ್ಲಿ ಕಳೆದ ಮೂರು ದಿನಗಳಿಂದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದರ ವಿರುದ್ಧ ಗುರುವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನಾರ್ಹ ಎಂದರು.

ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಇ.ಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ತನಿಖಾ ಸಂಸ್ಥೆಗಳ ದಾಳಿಗೆ ಹೆದರುವುದಿಲ್ಲ; ಜನಪರ ಹೋರಾಟ ನಿಲ್ಲುವುದಿಲ್ಲ, ನೇರವಾಗಿ ಎದುರಿಸಿ ಗಾಂಧಿ ಕುಟುಂಬವನ್ನು ಹಾಗೂ ಕಾಂಗ್ರೆಸ್‌ ಪಕ್ಷವನ್ನು ಎನ್ನುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ನಾಯಕ, ಜ್ಯೋತಿ ಗೊಂಡಬಾಳ, ನಗರಸಭೆ ಸದಸ್ಯ ಮುತ್ತುರಾಜ್‌ ಕುಷ್ಟಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.