ADVERTISEMENT

ಕ್ಷಯರೋಗ ಮುಕ್ತ ಸಮಾಜಕ್ಕೆ ಸಹಕರಿಸಿ- ಜಿ.ಪಂ. ಸಿಇಒ ಬಿ. ಫೌಜಿಯಾ ತರನ್ನುಮ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 11:47 IST
Last Updated 7 ಜನವರಿ 2022, 11:47 IST
ಕೊಪ್ಪಳ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳು ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಪೋಸ್ಟರ್‌ ಬಿಡುಗಡೆ ಮಾಡಿದರು
ಕೊಪ್ಪಳ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳು ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಪೋಸ್ಟರ್‌ ಬಿಡುಗಡೆ ಮಾಡಿದರು   

ಕೊಪ್ಪಳ: ಭಾರತವನ್ನು 2025ರೊಳಗೆ ಕ್ಷಯ ಮುಕ್ತಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಕಾರ್ಯತಂತ್ರ ಯೋಜನೆ ರೂಪಿಸಿದ್ದು, ಈ ನಿಟ್ಟಿನಲ್ಲಿ ಕರ್ನಾಟಕವನ್ನು ಕ್ಷಯರೋಗ ಮುಕ್ತ ಗೊಳಿಸಲು ಕಾರ್ಯ ತಂತ್ರ ಯೋಜನೆ ಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ. ಫೌಜಿಯಾ ತರನ್ನುಮ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಅಭಿಯಾನ ಪೋಸ್ಟರ್‌ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಜಂಟಿಯಾಗಿ ಕ್ಷಯ ನಿವಾರಣಾ ಆಂದೋಲನ, ಕ್ಷಯ ಆಸರೆ ಹಾಗೂ ಟಿ.ಬಿ. ಸೋಲಿಸಿ ಗ್ರಾಮ ಪಂಚಾಯಿತಿ ಗೆಲ್ಲಿಸಿ ಅಭಿಯಾನ ಅಡಿಯಲ್ಲಿ ಗ್ರಾಮ ಪಂಚಾಯತಿ ವತಿಯಿಂದ ವಿವಿಧ ಚಟುವಟಿಕೆಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯಿತಿ ಕಾರ್ಯಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಹೇಳಿದರು.

ADVERTISEMENT

ಕ್ಷಯಮುಕ್ತ ಗ್ರಾಮ ಪಂಚಾಯಿತಿ ಮಾಡುವ ಉದ್ದೇಶದಿಂದ ಎಲ್ಲಾ ಗ್ರಾಮಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಯೊಂದಿಗೆ ಸ್ಥಳೀಯ ಮುಖಂಡರು, ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯಶಿಕ್ಷಕರು, ಸ್ವಯಂ ಸೇವಾ ಸಂಸ್ಥೆಗಳ ಮುಖಂಡರು, ಯುವಕ ಮಂಡಳಿ ಮತ್ತು ಮಹಿಳಾ ಮಂಡಳಿಗಳ ಮುಖಂಡರು, ಧಾರ್ಮಿಕ ಮುಖಂಡರು ಹಾಗೂ ಇತರೆ ಗಣ್ಯ ವ್ಯಕ್ತಿಗಳನ್ನೊಳಗೊಂಡ ಕ್ಷಯ ಮುಕ್ತ ಗ್ರಾಮ ಪಂಚಾಯಿತಿ ಕಾರ್ಯಪಡೆಯನ್ನು ರೂಪಿಸಬೇಕು ಎಂದರು.

ಕಾರ್ಯಪಡೆಯ ಸಭೆಯನ್ನು ಕನಿಷ್ಟ ತಿಂಗಳಿಗೊಮ್ಮೆ ನಡೆಸಬೇಕು ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಾಗಿ ರೂಪಿಸಲಾದ ಕ್ರಿಯಾ ಯೋಜನೆಯ ಚಟುವಟಿಕೆಗಳ ಬಗ್ಗೆ ಪ್ರಗತಿ ಪರಿಶೀಲನೆ ಮತ್ತು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಗತ್ಯ ಸಲಹೆ ಮತ್ತು ಸಹಕಾರವನ್ನು ಕಾರ್ಯಪಡೆ ನೀಡಬೇಕು ಎಂದು ಹೇಳಿದರು.

ಜಾನಪದ ಕಲಾ ತಂಡಗಳಾದ ಬೀದಿ ನಾಟಕ, ಯಕ್ಷಗಾನ, ಗೀಗೀ ಪದ, ಕಥೆಗಳನ್ನು ಹೇಳುವ ಇತ್ಯಾದಿ ಪ್ರಕಾರಗಳ ಮೂಲಕ ಟಿ.ಬಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ, ರಂಗೋಲಿ ಇತ್ಯಾದಿ ಸ್ಪರ್ಧೆಯನ್ನು ಆಯೋಜಿಸಿ, ಟಿ.ಬಿ. ಸೇವೆಗಳ ಬಗ್ಗೆ ಬೇಡಿಕೆ ಮತ್ತು ಟಿ.ಬಿ. ಮುಕ್ತ ಗ್ರಾಮ ಪಂಚಾಯತಿ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಜಂಟಿಯಾಗಿ ‘ಕ್ಷಯ ಮುಕ್ತ ಕೊಪ್ಪಳ ಕಾರ್ಯತಂತ್ರ ಯೋಜನೆ‘ಯನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಆರೋಗ್ಯ ಇಲಾಖೆಯಿಂದ ಕ್ಷಯ ಮುಕ್ತ ಕೊಪ್ಪಳ ಕಾರ್ಯತಂತ್ರ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ನಿರ್ದೇಶನ ಮತ್ತು ಮಾರ್ಗದರ್ಶನ ನೀಡಲಾಗುವುದು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಗ್ರಾಮ ಪಂಚಾಯತಿಗಳಿಂದ ನಡೆಸಲಾಗುವ ಕಾರ್ಯ ಚಟುವಟಿಕೆಗಳ ಕುರಿತು ಖಾತ್ರಿಪಡಿಸಿ ಕೊಳ್ಳಲಾಗುವುದು ಮತ್ತು ಆರೋಗ್ಯ ಇಲಾಖೆಯ ಪೂರ್ಣ ಬೆಂಬಲ ನೀಡಲಾಗುವುದು. ಅದರಂತೆ ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಲ್ಲೂಕುವಾರು ಕ್ಷಯ ರೋಗದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ., ತಾ.ಪಂ ಇಒ ಕೆ.ಎಂ.ಮಲ್ಲಿಕಾರ್ಜುನ, ತಾ.ಪಂ. ಇಒ ಸೋಮಶೇಖರ ಬಿರಾದಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.