ಕೊಪ್ಪಳ: ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 3 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲ್ಲೂಕುಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಆರು ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿದೆ. ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ. ಆದ್ದರಿಂದ ಸರ್ಕಾರವೂ ಈಗ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ನೌಕರರು ಮನವಿ ಮಾಡಿದರು.
ಎನ್‌ಪಿಎಸ್ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿ ಮಾಡಬೇಕು. ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಆರ್. ಜುಮ್ಮನ್ನವರ, ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ್, ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ, ಖಜಾಂಚಿ ವೆಂಕಟೇಶ ಕುಲಕರ್ಣಿ, ನಿರ್ದೇಶಕರಾದ ವಂದನಾ, ಶಾಂತಾ ಚೌಡ್ಕಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಗೌಡ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರಗೌಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.