ಕೊಪ್ಪಳ: ‘ಡಿ.ದೇವರಾಜ ಅರಸು ಅವರು ಬಡ ಹಾಗೂ ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ಶ್ರಮಿಸಿದ್ದರು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಭವನದಲ್ಲಿ ಬುಧವಾರ ನಡೆದ ದೇವರಾಜ ಅರಸು ಅವರ 110ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ಅರಸು ಅವರನ್ನು ಇಂದು ಸ್ಮರಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಮಾತನಾಡಿ,‘ಕೆಲವರಿಗೆ 400ರಿಂದ 500 ಎಕರೆ ಜಮೀನು ಇದ್ದರೆ ಇನ್ನೂ ಕೆಲವು ಜನರಿಗೆ ಜಮೀನು ಇರಲಿಲ್ಲ. ಹಾಗಾಗಿ ಎಲ್ಲರಿಗೂ ಭೂಮಿ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ಉದ್ದೇಶದಿಂದ ದೇವರಾಜ ಅರಸರು ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದ ಧೀಮಂತ ನಾಯಕರು’ ಎಂದರು.
ಡಿವೈಎಸ್‌ಪಿ ಯಶವಂತಕುಮಾರ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ, ಪ್ರಾಚಾರ್ಯ ಮಂಜುನಾಥ, ಸಿದ್ದಲಿಂಗಪ್ಪ, ಚನ್ನಪ್ಪ ಹಂಚಿ, ಕೊಪ್ಪಳ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಾಗರತ್ನ, ತಾ.ಪಂ. ಇಒ ದುಂಡಪ್ಪ ತುರಾದಿ, ವಾರ್ತಾಧಿಕಾರಿ ಸುರೇಶ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಜಿಲ್ಲೆಯಲ್ಲಿ ನಮ್ಮ ಇಲಾಖೆಯ ಅಧೀನದಲ್ಲಿ 10021 ವಿದ್ಯಾರ್ಥಿಗಳು ಕಲಿಯುತ್ತಿದ್ದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇರುವುದೇ ಮಕ್ಕಳಿಗಾಗಿ. ಇದರ ಸದುಪಯೋಗ ಪಡೆದುಕೊಳ್ಳಬೇಕುನಾಗಮಣಿ ಹೊಸಮನಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.