ಕೊಪ್ಪಳ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವ್ಯಾಪ್ತಿಯ ಜಿಲ್ಲೆಗಳ ಪ್ರಗತಿಗೆ ರಾಜ್ಯ ಸರ್ಕಾರ ಈ ಸಲದ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ ₹5 ಸಾವಿರ ಕೋಟಿ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಮಂಡಳಿ ವ್ಯಾಪ್ತಿಯ ಜಿಲ್ಲೆಗಳ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಆರೋಪಿಸಿದ್ದಾರೆ.
ಮಧ್ಯೆ ಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
‘ಒಟ್ಟು ಅನುದಾನದಲ್ಲಿ ಶೇ 5ರಷ್ಟು ಮುಖ್ಯಮಂತ್ರಿ, ಶೇ 3ರಷ್ಟು ಮಂಡಳಿಯ ಅಧ್ಯಕ್ಷರಿಗೆ, ಯೋಜನಾ ಸಚಿವರಿಗೆ ಶೇ 3ರಷ್ಟು ಮತ್ತು ಕೆಕೆಆರ್‌ಡಿಬಿ ವ್ಯಾಪ್ತಿಯ ಆರು ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ತಲಾ ಶೇ 5ರಷ್ಟು ಅನುದಾನ ಹಂಚಿಕೆಯ ವಿವೇಚನಾ ಅಧಿಕಾರವಿರುತ್ತದೆ ಎಂದು ಅನುದಾನ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಅಂದಾಜು ₹2 ಸಾವಿರ ಕೋಟಿ ಖರ್ಚಾಗುತ್ತದೆ. ಉಳಿದ ₹3 ಸಾವಿರ ಕೋಟಿ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಗೆ ಅನ್ಯಾಯವಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕೆಕೆಆರ್‌ಡಿಬಿ ಮಂಡಳಿ ಸದಸ್ಯರನ್ನಾಗಿ ಬಿಜೆಪಿ ಹಾಗೂ ಜೆಡಿಎಸ್‌ನ ಯಾವ ಶಾಸಕರನ್ನೂ ಸೇರಿಸಿಕೊಂಡಿಲ್ಲ. ಇದರಿಂದ ನಮಗೆ ಅನ್ಯಾಯವಾಗಿದ್ದು, ಮಧ್ಯ ಪ್ರವೇಶಿಸಿ ಸರಿಪಡಿಸಬೇಕು. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ಜನರಿಗೆ ನೆರವಾಗಬೇಕು ಎಂದು ಕೋರಿದ್ದಾರೆ. ಈ ಭಾಗದ ಬಿಜೆಪಿ ಹಾಗೂ ಜೆಡಿಎಸ್‌ನ 14 ಜನ ಶಾಸಕರು ಪತ್ರಕ್ಕೆ ಸಹಿ ಮಾಡಿದ್ದಾರೆ.
ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಆಗಿರುವ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ, ‘ನಂಜುಂಡಪ್ಪ ವರದಿ ಪ್ರಕಾರ ಎಲ್ಲ ಪಕ್ಷಗಳ ಶಾಸಕರಿಗೂ ಸಮಾನವಾಗಿ ಅನುದಾನ ಹಂಚಿಕೆಯಾಗಬೇಕು. ಅದನ್ನು ಇಲ್ಲಿ ಪಾಲನೆ ಮಾಡಿಲ್ಲ. ಹಿಂದಿನ ಮಂಡಳಿಯಲ್ಲಿ ಎಲ್ಲ ಪಕ್ಷಗಳ ಶಾಸಕರಿಗೂ ಅವಕಾಶ ಕೊಡಲಾಗಿತ್ತು. ಈ ಬಾರಿ ಕಾಂಗ್ರೆಸ್ ಶಾಸಕರು ಮಾತ್ರ ಮಂಡಳಿಯಲ್ಲಿದ್ದಾರೆ. ಇದು ತಾರತಮ್ಯವಲ್ಲವೇ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.