ಕೊಪ್ಪಳ: ‘ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯದಲ್ಲಿ ಸರ್ಕಾರ ನಿಗದಿಪಡಿಸಿರುವ ಪ್ರಮಾಣದಂತೆ ಆಹಾರ ಸಾಮಗ್ರಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ಸೋಮವಾರ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಕೆಲ ನ್ಯಾಯಬೆಲೆ ಅಂಗಡಿಯವರು ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡುವ ಅಕ್ಕಿಯ ಪ್ರಮಾಣದಲ್ಲಿ ಕಡಿತ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಿ, ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ವಿತರಣೆಯನ್ನು ಸರ್ಕಾರ ನಿಗದಿಪಡಿಸಿರುವಂತೆ ನೀಡಬೇಕು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಾತನಾಡಿ, ‘ಬಡಜನರ, ಅಂಗನವಾಡಿ, ಶಾಲೆ ಮತ್ತು ಕುಡಿಯುವ ನೀರಿಗೆ ಸಂಬಂಧಿಸಿದ ವಿದ್ಯುತ್ ಬಿಲ್ ಬಾಕಿಯಿದ್ದರೆ, ನೇರವಾಗಿ ವಿದ್ಯುತ್ ಕಡಿತಗೊಳಿಸುವಂತಹ ಕಾರ್ಯಕ್ಕೆ ಹೋಗಬಾರದು. ವಿದ್ಯುತ್ ಬಿಲ್ ಪಾವತಿಸುವಂತೆ ಸಂಬಂಧಪಟ್ಟವರಿಗೆ ಸಮಾಧಾನದಿಂದ ತಿಳಿಸಬೇಕು’ ಎಂದು ಹೇಳಿದರು.
ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.