
ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲಿರುವ ಮಧುಶ್ರೀ ಗಾರ್ಡನ್ ಕಲ್ಯಾಣ ಮಂಟಪದಲ್ಲಿ ಫೆ. 17ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಜರುಗಲಿದ್ದು, ಸಮಿತಿ ಪ್ರಮುಖರು ಹಾಗೂ ಅಧಿಕಾರಿಗಳು ಶನಿವಾರ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿ ‘ಸರ್ಕಾರ ಬಡವರಿಗಾಗಿ ಸಾಕಷ್ಟು ಕೆಲಸ ಮಾಡಿದೆ, ಗ್ಯಾರಂಟಿ ಯೋಜನೆಗಳ ಮೂಲಕ ನೆರವಾಗುತ್ತಿದೆ. ವಾರ್ಷಿಕ ಸುಮಾರು ₹54 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜನರ ದುಡ್ಡನ್ನು ಅತ್ಯಂತ ಪ್ರಾಮಾಣಿಕವಾಗಿ ಜನರ ಸೇವೆಗೆ ಬಳಸಲಾಗುತ್ತಿದೆ. ಸರ್ಕಾರದ ಯೋಜನೆಗಳು ಹಾಗೂ ಗುರಿ ಜನರಿಗೆ ತಲುಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಸುಮಾರು 2000ಕ್ಕೂ ಅಧಿಕ ಗ್ಯಾರಂಟಿ ಫಲಾನುಭವಿಗಳು, ರೈತರು, ಯುವಜನರು ಬರುತ್ತಿದ್ದಾರೆ. ಅವರಿಗೆ ಕೂಡಲು ಆಸನ, ಊಟದ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಕಲ್ಯಾಣ ಮಂಟಪದ ಹೊರಭಾಗದಲ್ಲಿ ಎಲ್.ಇ.ಡಿ. ಮೂಲಕ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮ ಪೂರ್ವದಲ್ಲಿ ಸಂಗೀತ ಕಾರ್ಯಕ್ರಮ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.