
ಜನಾರ್ದನರೆಡ್ಡಿ
ಗಂಗಾವತಿ (ಕೊಪ್ಪಳ ಜಿಲ್ಲೆ): ‘ಬೆಳಗಾವಿ ಚಳಿಗಾಲ ಅಧಿವೇಶನ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಕ್ಷಣದಲ್ಲಾದರೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬಹುದು’ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಹೇಳಿದರು.
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲು ಮುಂದಾಗಿರುವ ಕಾರಣಕ್ಕೆ ಡಿಕೆಶಿ ದೇವಸ್ಥಾನಗಳ ಸುತ್ತ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ಪ್ರೀಯಾಂಕ್ ಖರ್ಗೆ, ಸಂತೋಷ ಲಾಡ್ ತಲೆಕೆಟ್ಟ ಮಂತ್ರಿಗಳಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಬಗ್ಗೆ ಮಾತನಾಡಿ ದೊಡ್ಡವರು ಎನ್ನುವ ಭ್ರಮೆಯಲ್ಲಿ ಇದ್ದಾರೆ. ಕಾಲವೇ ಇವರಿಗೆ ತಕ್ಕ ಉತ್ತರ ನೀಡಲಿದೆ’ ಎಂದರು.
‘ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲು ಹಣ ಇಲ್ಲ. ಹಾಗಾಗಿ 50:50 ಅನುಪಾತದಲ್ಲಿ ಕಾಮಗಾರಿಗಳು ನಡೆಸಬೇಕಾದ ಪರಿಸ್ಥಿತಿಯಿದೆ. ಗೃಹಲಕ್ಷ್ಮಿ ಹಣ ಹಾಕಲು ಸರ್ಕಾದ ಬಳಿ ಹಣವಿಲ್ಲ. ಲಕ್ಷ್ಮಿ ಹೆಬ್ಬಾಳಕರ್ ಸದನದಲ್ಲಿ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.